ಧಾರವಾಡ : ಧಾರವಾಡ ತಾಲೂಕಿನ ಶಿವಳ್ಳಿ ಬಳಿ ಕ್ರೂಸರ್ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆ ಆಗಿದೆ. ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಭಾನುವಾರ ರಾತ್ರಿ ಮೃತಪಟ್ಟಿದ್ದರು. ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಮೃತಪಟ್ಟಿದ್ದು, ಸಾವಿನ ಸಂಖ್ಯೆ 3ಕ್ಕೆ ಏರಿಕೆ ಆಗಿದೆ. ಮೃತರನ್ನು ನವಲಗುಂದ ತಾಲೂಕಿನ ಹೆಬ್ಬಾಳ ಗ್ರಾಮದ ಬಸವರಾಜ್ ಕುರಹಟ್ಟಿ (45), ಯಲ್ಲಪ್ಪ ಘಂಟಿ (55), ಧಾರವಾಡ ಗೊಲ್ಲರ್ ಓಣಿ ನಿವಾಸಿ ರೋಹನ್ ಅಂಗಡಿ (25) ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿ ಧಾರವಾಡ ತಾಲೂಕಿನ ಶಿವಳ್ಳಿ ಬಳಿ ಕ್ರೂಸರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಕ್ರೂಸರ್ ವಾಹನ ಪಲ್ಟಿಯಾಗಿತ್ತು. ಈ ವೇಳೆ ಕ್ರೂಸರ್ನಲ್ಲಿದ್ದ 13 ಮಂದಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆ ಮತ್ತು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಭಾನುವಾರ ರಾತ್ರಿ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇಂದು ಬೆಳಗ್ಗೆ ಬೈಕ್ ಸವಾರ ರೋಹನ್ ಮೃತಪಟ್ಟಿದ್ದಾನೆ. ರೋಹನ್ ಬೈಕ್ನಲ್ಲಿ ದೀಪಾವಳಿ ಹಬ್ಬಕ್ಕೆಂದು ನವಲಗುಂದದಿಂದ ಪಟಾಕಿ ತರುತ್ತಿದ್ದ. ಈ ವೇಳೆ ಬೈಕ್ ಕ್ರೂಸರ್ಗೆ ಡಿಕ್ಕಿಯಾಗಿತ್ತು. ತಕ್ಷಣ ರೋಹನ್ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಧಾರವಾಡ ಜಿಲ್ಲಾಸ್ಪತ್ರೆಗೆ ನವಲಗುಂದ ಶಾಸಕ ಎನ್.ಎಚ್ ಕೋನರೆಡ್ಡಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಈ ಬಗ್ಗೆ ಮಾತನಾಡಿದ ಅವರು, ಧಾರವಾಡದಲ್ಲಿ ನಿನ್ನೆ ರಾತ್ರಿ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಧಾರವಾಡ ಜಿಲ್ಲಾಸ್ಪತ್ರೆ ಮತ್ತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದು, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಕಾರು ಚಾಲಕನಿಂದ ಸರಣಿ ಅಪಘಾತ : ಕಾರು ಚಾಲಕನೊಬ್ಬ ಸರಣಿ ಅಪಘಾತ ಎಸಗಿರುವ ಘಟನೆ ಭಾನುವಾರ ಸಂಜೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದ ಬಳಿ ನಡೆದಿತ್ತು. ಅಪಘಾತದಲ್ಲಿ ಒಡಿಶಾ ಮೂಲದ ಸ್ಮಿತಾ, ಕಿರಣ್, ಮೊಯ್ಸಿನ್ ಎಂಬುವರು ಗಾಯಗೊಂಡಿದ್ದಾರೆ. ಮೂವರು ಗಾಯಾಳುಗಳ ಪೈಕಿ ಸ್ಮಿತಾ ಎಂಬವರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಮೂರು ದ್ವಿಚಕ್ರ ವಾಹನಗಳು ಜಖಂಗೊಂಡಿವೆ.
ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಕಾರು ಚಾಲಕ ಅಗರ್ವಾಲ್ ಜಿಗಣಿ ಕಡೆಯಿಂದ ನಗರದ ಕಡೆಗೆ ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರ ಮಾರ್ಗವಾಗಿ ಬರುತ್ತಿದ್ದರು. ಈ ವೇಳೆ ವ್ಯಕ್ತಿಯೊಬ್ಬರು ಏಕಾಏಕಿ ಕಾರಿಗೆ ಅಡ್ಡ ಬಂದಿದ್ದಾರೆ. ಈ ವೇಳೆ ತಬ್ಬಿಬ್ಬಾದ ಕಾರು ಚಾಲಕ ದಿಢೀರ್ ಬ್ರೇಕ್ ಹಾಕುವ ಭರದಲ್ಲಿ ಎಕ್ಸಲೇಟರ್ ತುಳಿದಿದ್ದಾರೆ. ಇದರಿಂದ ನಿಯಂತ್ರಣ ತಪ್ಪಿದ ಕಾರು ಮುಂದೆ ಹೋಗುತ್ತಿದ್ದ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದು, ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಂತಿತ್ತು.
ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಸಂಚಾರಿ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ಹುಳಿಮಾವು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಆಂಬ್ಯುಲೆನ್ಸ್ ನಲ್ಲಿ ಸ್ನೇಹಿತರೊಂದಿಗೆ ಜಾಲಿ ಟ್ರಿಪ್: ಚಾಲಕನಿಗೆ ಬಿತ್ತು ಪೊಲೀಸರಿಂದ ದಂಡ...!