ಹುಬ್ಬಳ್ಳಿ: ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಯಲ್ಲಿ ಐಎಸ್ಐ, ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳ ಕೈವಾಡವಿದೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ತಹಶೀಲ್ದಾರ್ ಕಚೇರಿ ಎದುರು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಘಟನೆ ಹಿಂದೆ ಹಲವು ಸಂಘಟನೆಗಳ ಕೈವಾಡವಿದೆ ಎಂಬ ಶಂಕೆ ಇದೆ. ಅವುಗಳನ್ನು ನಿಷೇಧಿಸಬೇಕು. ಈ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆ. ಗಲಭೆಯಲ್ಲಿ ಹಾನಿಯಾದ ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿಗಳನ್ನು ಅವರಿಂದಲೇ ಭರ್ತಿ ಮಾಡಿಸಬೇಕು ಎಂದು ಒತ್ತಾಯಿಸಿದರು.
ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆದಿದ್ದು, ಖಂಡನೀಯ. ಮೂರು ದಿನಗಳ ಹಿಂದೆಯೇ ದೇಶದಲ್ಲಿ ಕೋಮುಗಲಭೆ ಸೃಷ್ಟಿಸಲು ಐಎಸ್ಐ ಸಂಚು ರೂಪಿಸುತ್ತಿದೆ ಎಂದು ಕೇಂದ್ರ ಗೃಹ ಇಲಾಖೆ ವರದಿ ನೀಡಿತ್ತು. ಹಾಗಾಗಿಯೇ ಘಟನೆ ಹಿಂದೆ ಪಾಕಿಸ್ತಾನದ ಐಎಸ್ಐ ಕೈವಾಡವಿದೆ ಎನ್ನುವ ಸಂಶಯ ವ್ಯಕ್ತವಾಗುತ್ತಿದೆ. ಆದ್ದರಿಂದ ಸಮಗ್ರ ತನಿಖೆ ನಡೆಸಬೇಕು ಎಂದು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.