ಗದಗ : ಕೊರೊನಾದಿಂದಾಗಿ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸೋಂಕಿತ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಖಚಿತಪಡಿಸಿದ್ದಾರೆ.
ಮಧುಮೇಹ ಹಾಗೂ ಮೂತ್ರಕೋಶ ತೊಂದರೆಯಿಂದ ಬಳಲುತ್ತಿದ್ದ 44 ವರ್ಷದ ಲಕ್ಕುಂಡಿ ಗ್ರಾಮದ ಆ ವ್ಯಕ್ತಿ ಗದಗ ಸಿಎಸ್‍ಐ ಆಸ್ಪತ್ರೆಗೆ ಮೇ 27ರಂದು ದಾಖಲಾಗಿದ್ದರು. ಜೂನ್ 1ರಂದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆ ವ್ಯಕ್ತಿ ಇಂದು ಮೃತಪಟ್ಟಿದ್ದು, ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ಮೃತರ ಅಂತ್ಯ ಸಂಸ್ಕಾರವು ಕೋವಿಡ್-19 ವಿಪತ್ತು ನಿರ್ವಹಣಾ ಮಾರ್ಗಸೂಚಿ ರೀತ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ತಿಳಿಸಿದ್ದಾರೆ.