ಗದಗ: ಕೆಪಿಸಿಸಿ ಅಧ್ಯಕ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿ ಖಂಡಿಸಿ ಗದಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನೆರೆದಿದ್ದ ಕಾರ್ಯಕರ್ತರು, ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಮತ್ತು ಯೋಗಿ ಆದಿತ್ಯನಾಥ್ ಅವರ ಭಾವಚಿತ್ರ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಿಬಿಐಯನ್ನು ರಾಜಕೀಯವಾಗಿ ಬಳಸಿಕೊಂಡು ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಸಿಎಂ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಉಪ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ನಡೆದ ಸಿಬಿಐ ದಾಳಿ ರಾಜಕೀಯ ಪ್ರೇರಿತವಾಗಿದೆ. ಚುನಾವಣೆಯಲ್ಲಿ ಹಿನ್ನಡೆ ಸಾಧಿಸುವ ಭಯದಿಂದ ಸಿಬಿಐ ಮುಂದಿಟ್ಟುಕೊಂಡು ಕುತಂತ್ರ ನಡೆಸಲಾಗುತ್ತಿದೆ ಎಂದು ದೂರಿದರು.