ಗದಗ: ಮನೆಯಲ್ಲಿರುವ ಒಂಟಿ ಮಹಿಳೆಯೊಬ್ಬಳನ್ನು ಭೀಕರವಾಗಿ ಹತ್ಯೆ ಮಾಡಿ ಮನೆ ಬೀಗ ಹಾಕಿಕೊಂಡು ಎಸ್ಕೇಪ್ ಆದ ಘಟನೆ ನಗರದ ಕೆ.ಸಿ ರಾಣಿ ರಸ್ತೆಯಲ್ಲಿ ನಡೆದಿದೆ.
65 ವರ್ಷದ ಪುಷ್ಪಾ ಹೆಬಸೂರ ಕೊಲೆಯಾದ ಮಹಿಳೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ನಗರದ ಜನದಟ್ಟಣೆಯ ಪ್ರದೇಶದಲ್ಲಿ ಹಾಡುಹಗಲೆ ಕೊಲೆಮಾಡಿ ಎಸ್ಕೇಪ್ ಆಗಿದ್ದಾರೆ. ಮೃತ ಮಹಿಳೆಗೆ ನಾಲ್ಕು ಜನ ಹೆಣ್ಣು ಮಕ್ಕಳಿದ್ದು, ಅವರು ಬೇರೆ ಬೇರೆ ಕಡೆಯಲ್ಲಿದ್ದಾರೆ. ಮನೆಯಲ್ಲಿ ಒಬ್ಬಳೆ ಇದ್ದಾಗ ದುಷ್ಕರ್ಮಿಗಳು ಕಲ್ಲಿನಿಂದ ತಲೆಗೆ ಜಜ್ಜಿ ಕೊಲೆಮಾಡಿ, ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾರೆ. ನಗರದ ಹೃದಯ ಭಾಗದಲ್ಲಿಯೇ ಭೀಕರ ಹತ್ಯೆ ನಡೆದಿರುವುದು ಜನರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.
ಘಟನಾ ಸ್ಥಳಕ್ಕೆ ಎಸ್.ಪಿ ಯತೀಶ್ ಎನ್, ಡಿವೈಎಸ್ಪಿ ಪ್ರಲ್ಹಾದ್, ಸಿಪಿಐ ಭೀಮನಗೌಡ ಬಿರಾದಾರ, ಸಿಬ್ಬಂದಿ, ಬೆರಳಚ್ಚು ತಜ್ಞರು, ಶ್ವಾನದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗದಗದ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.