ಗದಗ: ತಾಲೂಕಿನ ಲಕ್ಕುಂಡಿ ಉತ್ಸವವನ್ನು ವಿಶಿಷ್ಟ ಹಾಗೂ ಅರ್ಥಪೂರ್ಣವಾಗಿ ಸಂಭ್ರಮದಿಂದ ಆಚರಿಸುವ ಸಂಕಲ್ಪ ಹೊಂದಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಲಕ್ಕುಂಡಿ ಉತ್ಸವದ ಪೂರ್ವಭಾವಿ ಸಭೆಯಲ್ಲಿ ಹೇಳಿದರು.
ಲಕ್ಕುಂಡಿ ಉತ್ಸವದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದ ಸಚಿವ ಸಿ.ಸಿ.ಪಾಟೀಲ್, ಲಕ್ಕುಂಡಿ ಉತ್ಸವವು ಮಾರ್ಚ್ 21 ಹಾಗೂ 22ರಂದು ನಡೆಯಲಿದೆ. ರಾಜ್ಯದ ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸಿ.ಟಿ.ರವಿ ಹಾಗೂ ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್ ಭಾಗವಹಿಸುವದಾಗಿ ತಿಳಿಸಿದ್ದು, ಮುಖ್ಯಮಂತ್ರಿಗಳು ಉದ್ಘಾಟನೆ ಸಮಾರಂಭಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದರು.
ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೆ ಹಾಗೂ ಖ್ಯಾತ ಕಲಾವಿದರಿಗೆ ಸೂಕ್ತ ಅವಕಾಶ ನೀಡಲಾಗುವುದು. ಉತ್ಸವದ ಸಂದರ್ಭದಲ್ಲಿ ಪರಿಸರದ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಬ್ಯಾನರ್ ಹಾಗೂ ಪ್ಲಾಸ್ಟಿಕ್ ಮುಕ್ತ ಉತ್ಸವವನ್ನಾಗಿಸಲು ಉದ್ದೇಶ ಹೊಂದಲಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆ ಗ್ರಾಮೀಣ ಕ್ರೀಡೆಗಳು , ವಿಚಾರ ಗೋಷ್ಠಿ, ಕವಿಗೋಷ್ಠಿ, ಹೀಗೆ ವೈವಿಧ್ಯಮಯವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಅಲ್ಲದೇ ಉತ್ಸವಕ್ಕಾಗಿ ಸರ್ಕಾರದಿಂದ 50 ಲಕ್ಷ ರೂ. ಪ್ರವಾಸೋದ್ಯಮ ಇಲಾಖೆಯಿಂದ 30 ಲಕ್ಷ ರೂ. ಹಣ ಬಿಡುಗಡೆ ಮಾಡಿದ್ದು, ವಿಶೇಷ ಅನುದಾನವನ್ನು ಮುಖ್ಯಮಂತ್ರಿಗಳ ಹತ್ತಿರ ಕೇಳಲಾಗುವುದು ಎಂದು ತಿಳಿಸಿದರು.