ಗದಗ : ರಾಜ್ಯ ಬಿಜೆಪಿಯಲ್ಲಿ ವಲಸಿಗರಿಂದ ಯಾವುದೇ ಗೊಂದಲ ಸೃಷ್ಟಿಯಾಗಿಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ನಗರದ ಪ್ರವಾಸಿಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿರಲಿಲ್ಲ. 17 ಜನ ಶಾಸಕರು ತಮ್ಮ ಸ್ವಪಕ್ಷಕ್ಕೆ ರಾಜೀನಾಮೆ ಕೊಟ್ಟ ಬಂದು ನಮ್ಮ ಸರ್ಕಾರದ ಜೊತೆ ಕೈಜೋಡಿಸಿದ ವಿಚಾರ ಎಲ್ಲರಿಗೂ ಗೊತ್ತಿದೆ. ನಮ್ಮ ಸರ್ಕಾರ ರಚಿಸುವಲ್ಲಿ ಸಹಾಯ ಮಾಡಿದವರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ.
ಆ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಕೆಲಸ ಮಾಡುತ್ತಿದ್ದಾರೆ. ಪಕ್ಷದ ಅಧಿಕೃತ ಯಾವುದೇ ವೇದಿಕೆಯಲ್ಲಿ ಗೊಂದಲವಿಲ್ಲ. ಸಚಿವ ಸಂಪುಟದ ಬಗ್ಗೆ ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧವಾಗಿದ್ದೇವೆ ಎಂದರು.
ಸಿಎಂ ರಾಜಕೀಯ ಕಾರ್ಯದರ್ಶಿ ಎನ್ ಆರ್ ಸಂತೋಷ್ ಆತ್ಮಹತ್ಯೆ ಯತ್ನ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದೇನು ದೊಡ್ಡ ವಿಚಾರ ಅಲ್ಲ. ಅವರು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಗುಣಮುಖವಾದ ಬಳಿಕ ಅವರು ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದರು ಅನ್ನೋ ಸತ್ಯಾ-ಸತ್ಯತೆ ಗೊತ್ತಾಗುತ್ತದೆ. ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದರು.
ವೀರಶೈವ-ಲಿಂಗಾಯತ ಮೀಸಲಾತಿಗೆ ಸಂಬಂಧಿಸಿದಂತೆ ಕಳೆದ 35 ವರ್ಷಗಳಿಂದ ವೀರಶೈವ-ಲಿಂಗಾಯತ ಸಮುದಾಯನ್ನು ಹಿಂದುಳಿದ ವರ್ಗಕ್ಕೆ ಸೇರಿಸುವಂತೆ ಬೇಡಿಕೆಯಿದೆ. ಈ ಬಗ್ಗೆ ಸರ್ಕಾರಗಳಿಗೆ ಮನವಿಗಳನ್ನೂ ಸಲ್ಲಿಸಿದ್ದಾರೆ. ಈ ಬಗ್ಗೆ ಕಾನೂನಾತ್ಮಕವಾಗಿ ಸಮಗ್ರವಾಗಿ ಚಿಂತಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಆರ್ಥಿಕ ಇಲಾಖೆಯ ಅನುಮೋದನೆ ಸಿಕ್ಕಿದೆ. ಖಾಲಿ ಇರುವ ಹುದ್ದೆಗಳ ಭರ್ತಿ ಕಾರ್ಯ ನಡೆಯುತ್ತಿದೆ. ಇನ್ನೆರಡು ವರ್ಷಗಳಲ್ಲಿ ಇನ್ನುಳಿದ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.