ಗದಗ: ಗುರುವಾರ ರಾಜ್ಯಾದ್ಯಂತ ನಡೆಯಲಿರುವ 10ನೇ ತರಗತಿ ಪರೀಕ್ಷೆಗೆ ಜಿಲ್ಲೆಯಲ್ಲಿ ಸಕಲ ರೀತಿಯ ಸಿದ್ಧತೆಗಳು ಅಂತಿಮ ಹಂತದಲ್ಲಿವೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸ್ವಚ್ಛತಾ ಕಾರ್ಯ ಮಾಡಲಾಗುತ್ತಿದೆ.
ಜಿಲ್ಲೆಯ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ ನಂಬರ್ ಹಾಕುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಈ ಬಾರಿ ಒಟ್ಟು 14,210 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಇವರಲ್ಲಿ ಕಂಟೇನ್ಮೆಂಟ್ ಪ್ರದೇಶದ 31 ವಿದ್ಯಾರ್ಥಿಗಳೂ ಸೇರಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಕಂಟೇನ್ಮೆಂಟ್ ಪ್ರದೇಶದ ವಿದ್ಯಾರ್ಥಿಗಳಿಗೆ N95 ಮಾಸ್ಕ್ ವ್ಯವಸ್ಥೆ ಮಾಡಲಾಗಿದ್ದು, ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ.
ಇತರೆ ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯುವಂತೆ ಸೂಚಿಸಲಾಗಿದೆ. ಕಂಟೇ ನ್ಮೆಂಟ್ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವಾಹನದ ವ್ಯವಸ್ಥೆಯಾಗಿದೆ. ಪರೀಕ್ಷೆಯ ಅನುಕೂಲಕ್ಕಾಗಿಯೇ 122 ಕೆಎಸ್ಆರ್ಟಿಸಿ ಬಸ್, 31 ಖಾಸಗಿ ಬಸ್‌ಗಳ ವ್ಯವಸ್ಥೆ ನಡೆದಿದೆ. 2,234 ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ ಮೂಲಕ ಕೇಂದ್ರಗಳಿಗೆ ಬರಲಿದ್ದು, ಖಾಸಗಿ ಬಸ್ ಮೂಲಕವೂ 572 ವಿದ್ಯಾರ್ಥಿಗಳು ಆಗಮಿಸಲಿದ್ದಾರೆ.
ಜಿಲ್ಲಾದ್ಯಂತ ಸುರಕ್ಷಿತ ಹಾಗೂ ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಎಲ್ಲಾ ತಯಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.