ಗದಗ: ರೈತರ ಹೋರಾಟದ ಕಿಚ್ಚು ಗದಗ ಜಿಲ್ಲೆಯಲ್ಲಿಯೂ ಜೋರಾಗಿದೆ. ಕರ್ನಾಟಕ ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ನೇತೃತ್ವದಲ್ಲಿ ನೂರಾರು ರೈತರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಿಲುವುಗಳನ್ನು ಖಂಡಿಸಿ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ರೈತ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು. ಶಾಶ್ವತ ಖರೀದಿ ಕೇಂದ್ರ ತೆರೆಯಬೇಕು. ಕೇಂದ್ರದ ಕೃಷಿ ನೀತಿ ಕೈಬಿಡಬೇಕು. ಹೀಗೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಒಲೆ ಹೂಡಿ ಅಡುಗೆ ಮಾಡಿ ಉಪಹಾರ ತಯಾರಿಸುವ ಮೂಲಕ ಧರಣಿ ನಡೆಸಿದರು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತ ಸೇನೆಯಿಂದ ನಾಳೆ ಸಂಪೂರ್ಣ ಬಂದ್ ಮಾಡುತ್ತೇವೆ. ಅಂಗಡಿ ಮುಂಗಟ್ಟು ವ್ಯಾಪಾರ ವಹಿವಾಟು, ಆಟೋ, ವಾಹನ ಸಂಚಾರ ಬಂದ್ ಮಾಡುವಂತೆ ಮನವಿ ಮಾಡಿಕೊಂಡಿದ್ದೇವೆ. ರೈತರ ಹೋರಾಟಕ್ಕೆ ಮಣಿಯದೆ ಹೊದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ರೈತ ಸೇನಾ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.