ಗದಗ: ಜಿಲ್ಲೆಯ ಕಾಂಗ್ರೆಸ್ ಪಕ್ಷದ ಲಕ್ಕುಂಡಿ ಮತಕ್ಷೇತ್ರದ ಜಿಲ್ಲಾ ಪಂಚಾಯತಿ ಸದಸ್ಯ ಸಿದ್ದು ಪಾಟೀಲ್, ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇವರು ಕರ್ನಾಟಕದಲ್ಲೇ ಅತಿ ಚಿಕ್ಕ ವಯಸ್ಸಿನ ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿದ್ದಾರೆ.
ಗದಗ ಜಿಲ್ಲಾ ಪಂಚಾಯತಿ ಅಧ್ಯಕ್ಷರ ರಾಜೀನಾಮೆ ಬಳಿಕ ಯುವಕನ ಪಾಲಿಗೆ ಅಧಿಕಾರದ ಚುಕ್ಕಾಣಿ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ, ತನ್ನ ಸಕ್ರಿಯ ಯುವ ಕಾರ್ಯಕರ್ತನಿಗೆ ಮಣೆ ಹಾಕಿದೆ. ಆ ಮೂಲಕ 27 ವರ್ಷ ವಯಸ್ಸಿನ ಸಿದ್ದು ಪಾಟೀಲ್ರನ್ನು ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಇದು ಪಕ್ಷದ ಯುವ ಕಾರ್ಯಕರ್ತರಲ್ಲಿ ಹುಮ್ಮಸ್ಸು ಮೂಡಿಸಿದೆ.
ಅಧ್ಯಕ್ಷ ಸ್ಥಾನದ ಅಧಿಕಾರ ಸ್ವೀಕರಿಸಿ ಮಾತನಾಡಿದ ಸಿದ್ದು ಪಾಟೀಲ್, ಇಷ್ಟು ಸಣ್ಣ ವಯಸ್ಸಿನಲ್ಲಿಯೇ ನನ್ನ ಜಿಲ್ಲಾ ಪಂಚಾಯತಿ ಅಧ್ಯಕ್ಷನನ್ನಾಗಿ ಮಾಡಿದ ಎಲ್ಲಾ ಕಾಂಗ್ರೆಸ್ನ ಸದಸ್ಯರಿಗೂ ಹಾಗೂ ಮುಖಂಡರಿಗೆ ಧನ್ಯವಾದಗಳು. ನೆರೆ ಹಾವಳಿಯಿಂದ ಜಿಲ್ಲೆಯಲ್ಲಿ ಹಲವಾರು ಸಮಸ್ಯೆಗಳು ಉಂಟಾಗಿವೆ, ಮೊದಲು ಅವುಗಳ ಬಗ್ಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು. ನಂತರದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಲಾಗುವುದು ಎಂದರು.
ಇನ್ನು ಚುನಾವಣೆ ಪ್ರಕ್ರಿಯೆ ನಡೆಸಿದ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲನ್ ಆದಿತ್ಯ ಬಿಸ್ವಾಸ್ ನೂತನ ಜಿಲ್ಲಾ ಪಂಚಾಯತಿ ಅಧ್ಯಕ್ಷರನ್ನು ಹೂಗುಚ್ಛ ನೀಡಿ ಅಭಿನಂದಿಸಿದರು. ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ್, ಜಿ.ಪಂ. ಸಿಇಓ ಆನಂದ ಕೆ. ಹಾಗೂ ಸದಸ್ಯರು ಉಪಸ್ಥಿತರಿದ್ದರು.