ಗದಗ: ಕೊರೊನಾ ರಾಜ್ಯಾದ್ಯಂತ ಆರ್ಭಟಿಸುತ್ತಿದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರವು ನಾನಾ ಕಸರತ್ತು ಮಾಡುತ್ತಿದೆ. ಆದರೂ ಕೂಡ ಕೊರೊನಾ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ. ಇಂತಹ ವೇಳೆಯಲ್ಲಿ ಇಲ್ಲೊಂದು ಗ್ರಾಮ ಪಂಚಾಯತ್ ಮಾದರಿ ಕೆಲಸ ಮಾಡುತ್ತಿದೆ. ಕೊರೊನಾ ಮಟ್ಟಹಾಕಲು ಹೊಸ ಪ್ಲಾನ್ ಮಾಡಿಕೊಂಡಿದೆ.
ಗದಗ ತಾಲೂಕಿನ ಸೊರಟೂರು ಗ್ರಾಮ ಪಂಚಾಯತ್ ಮಾದರಿ ಕೆಲಸವನ್ನು ಮಾಡುತ್ತಿದೆ. ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಸಮಿತಿ ರಚನೆ ಮಾಡಿಕೊಳ್ಳಲಾಗಿದೆ. ಈ ಸಮಿತಿಯಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸರ್ಕಾರಿ ಶಾಲಾ ಶಿಕ್ಷಕರು ಸೇರಿದಂತೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಕುರಿತು ಗ್ರಾಮದಲ್ಲಿ ಜಾಗೃತಿ ಮೂಡಿಸುವುದು, ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಸರ್ ಬಳಸುವಂತೆ ಜಾಗೃತಿ ಮೂಡಿಸುತ್ತಿದ್ದಾರೆ. ಮಾಸ್ಕ್ ಧರಿಸದೆ ಓಡಾಡಿದವರಿಗೆ ದಂಡವನ್ನು ಹಾಕುತ್ತಿದ್ದಾರೆ. ಬೆಳಗ್ಗೆಯಿಂದ ಕಾರ್ಯಕ್ಕೆ ಇಳಿಯುವ ಈ ಟೀಂ, 10 ಗಂಟೆಗೆ ಗ್ರಾಮವನ್ನು ಸಂಪೂರ್ಣ ಲಾಕ್ ಮಾಡಿಸುತ್ತದೆ.
ಇನ್ನು ಬೆಂಗಳೂರು ಸೇರಿದಂತೆ ನಾನಾ ಜಿಲ್ಲೆಗಳಿಂದ ಬಂದ ಸುಮಾರು 150 ಜನರನ್ನು ಪತ್ತೆ ಮಾಡಿ, ಹೋಮ್ ಐಸೋಲೇಷನ್ ಮಾಡಿದ್ದಾರೆ. ನಿತ್ಯ ಗ್ರಾಮಕ್ಕೆ ಅಪರಿಚಿತರು ಬಂದರೆ ಈ ಟಾಸ್ಕ್ ಫೋರ್ಸ್ ಸಮಿತಿ ಸದಸ್ಯರು ವಿಚಾರಣೆ ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿ, ಆರೋಗ್ಯದಲ್ಲಿ ಏನಾದರೂ ಏರುಪೇರು ಆದರೆ ಅವರನ್ನು ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡುತ್ತಿದ್ದಾರೆ. ಕೊರೊನಾ ನಿಯಂತ್ರಣ ಮಾಡುವಲ್ಲಿ ನಮ್ಮ ಗ್ರಾಮ ಪಂಚಾಯತ್ ಮಾದರಿ ಕೆಲಸ ಮಾಡುತ್ತಿದೆ ಅಂತಾರೆ ಗ್ರಾಮಸ್ಥರು.
ಓದಿ : ಕೊರೊನಾ ಸೋಂಕಿತರಿಗೆ ಉಚಿತ ಊಟ.. ಹಸಿವು ನೀಗಿಸುವ ಯುವ ಬ್ರಿಗೇಡ್ ಕಾರ್ಯಕ್ಕೆ ಸಲಾಂ