ಹೊಳೆನರಸೀಪುರ: ಮಲೆನಾಡ ಪ್ರದೇಶದಲ್ಲಿ ಬಸ್ ಸಂಚರಿಸಲು ಸಾಧ್ಯವಾಗದ ಪ್ರದೇಶಗಳಲ್ಲಿ ಹತ್ತು ಮಿನಿ ಬಸ್ಗಳನ್ನು ನೀಡುವಂತೆ ಸಾರಿಗೆ ಸಚಿವರಿಗೆ ಮನವಿ ನೀಡಲಾಗಿದೆ ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ರೇವಣ್ಣ ಹೇಳಿದರು.
ಹೊಳೆನರಸೀಪುರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿ, ಕಾಂಕ್ರಿಟೀಕರಣ ಹಾಗೂ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನರೆವೇರಿಸಿದ ಬಳಿಕ ಅವರು ಮಾತನಾಡಿದರು.
ಸಕಲೇಶಪುರ, ಆಲೂರು, ಬೇಲೂರು ಮತ್ತು ಅರಕಲಗೂಡು ತಾಲೂಕಿನ ಕೆಲವೆಡೆ ಸಾರಿಗೆ ಸಂಸ್ಥೆಯ ಬಸ್ಗಳು ಸಂಚರಿಸುವುದು ಕಷ್ಟವಾಗಿದ್ದು, ಇದರಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಮತ್ತು ನಾಗರಿಕರಿಗೆ ಹೆಚ್ಚು ಅನುಕೂಲವಾಗುವಂತೆ ಕೆ.ಎಸ್.ಆರ್.ಟಿ.ಸಿಯಿಂದ ಬಸ್ಗಳನ್ನು ಒದಗಿಸುವಂತೆ ಸಾರಿಗೆ ಸಚಿವರ ಗಮನಕ್ಕೆ ತಂದಿರುವುದಾಗಿ ಹೇಳಿದರು.
ತಾಲೂಕು ಕೇಂದ್ರಗಳಲ್ಲಿ ಮೂಲಸೌಕರ್ಯಗಳ ಕೊರತೆಯಾಗದಂತೆ ಅಭಿವೃದ್ಧಿಗೆ 5 ಕೋಟಿ ಮೀಸಲಿರಿಸಿದ್ದು, ರಾಜ್ಯ ಸಾರಿಗೆ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಕೆ.ಎಸ್.ಆರ್.ಟಿ.ಸಿ ನೌಕರರ ವಸತಿ ಗೃಹ ನಿರ್ಮಿಸಿಕೊಡಲಾಗುವುದು. ಪ್ರಸ್ತುತ ಇರುವ ಪ್ರಾದೇಶಿಕ ಕಾರ್ಯಾಗಾರದಲ್ಲಿ 12 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಯಂತ್ರೋಪಕರಣ ಖರೀದಿಗೆ ಹಾಗೂ ಇತರ ಕಾರ್ಯಗಳಿಗೆ ಶೀಘ್ರದಲ್ಲೇ ಚಾಲನೆ ನೀಡುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ಬಡವರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ ಮೊಸಳೆ ಹೊಸಹಳ್ಳಿ ಗ್ರಾಮದಲ್ಲಿ ಎಂಜಿನಿಯರಿಂಗ್ ಕಾಲೇಜು, ಪ್ರಥಮ ದರ್ಜೆ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಪ್ರಾರಂಭಿಸಲಾಗಿದೆ. ಇದ ಉಪಯೋಗವನ್ನು ಗ್ರಾಮೀಣ ಭಾಗದ ರೈತರ ಮಕ್ಕಳು ಪಡೆಯಬೇಕು. ಇನ್ನು ಹೊಳೆನರಸೀಪುರ ಪಟ್ಟಣದಲ್ಲಿ 7 ಕೋಟಿ ವೆಚ್ಚದಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಸಚಿವರು ಇದೇ ವೇಳೆ ಮಾಹಿತಿ ನೀಡಿದರು.
ಇನ್ನು ಜಿಲ್ಲೆಯ ಗಾಂಧಿವಾದಿ ರಾಮಪ್ರಸಾದ್ ಅವರ ಸ್ಮರಣಾರ್ಥ ಹಿಂದಿ ಪ್ರಚಾರ ಭವನವವೊಂದನ್ನು 1.2 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿದರು.