ಹಾಸನ : ಸರ್ಕಾರಿ ಪದವಿ ಕಾಲೇಜುಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ನೀಡುವಂತೆ ಒತ್ತಾಯಿಸಿ ಆಲ್ ಇಂಡಿಯಾ ಡೆಮಕ್ರೆಟಿಕ್ ಸ್ಟುಡೆಂಟ್ ಆರ್ಗನೈಸೇಷನ್ (ಎಐಡಿಎಸ್‌ಒ) ವತಿಯಿಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ನಗರದ ಹೇಮಾವತಿ ಪ್ರತಿಮೆಯಿಂದ ಪ್ರತಿಭಟನಾ ಮೆರವಣಿಗೆ ಹೊರಟು, ಎನ್ಆರ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ವಿದ್ಯಾರ್ಥಿಗಳು 2019 -20 ನೇ ಸಾಲಿನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟ್ಯಾಪ್ ನೀಡುತ್ತಿರುವುದನ್ನು ಸ್ವಾಗತಿಸುತ್ತೇವೆ. ಆದರೆ, ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಕೂಡ ಈ ಯೋಜನೆಯ ಫಲ ಸಿಗಬೇಕು ಎಂದು ಆಗ್ರಹಿಸಿದರು.
ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಿಕೊಂಡು ಇನ್ನು ಕೇವಲ ಎರಡು ಮೂರು ತಿಂಗಳಲ್ಲಿ ಹೊರ ಹೋಗುತ್ತಾರೆ. ಅವರಿಗೆ ಉಚಿತ ಲ್ಯಾಪ್ ಟ್ಯಾಪ್ ನೀಡುವುದರಿಂದ ಅವರೂ ಕೂಡ ಉನ್ನತ ವ್ಯಾಸಾಂಗ ನಡೆಸಲು ಅನುಕೂಲವಾಗುತ್ತದೆ ಎಂದರು.