ಹಾಸನ: ಮಹಿಳೆಯೋರ್ವಳನ್ನು ಕೊಲೆ ಮಾಡಿ, ಅತ್ಯಾಚಾರ ಎಸಗಿದ ಕಾಮುಕನನ್ನು ಬಂಧಿಸಿ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಿಲ್ಲಾಧಿಕಾರಿ ಆರ್. ಗಿರೀಶ್ರವರಿಗೆ ಮನವಿ ಸಲ್ಲಿಸಲಾಯಿತು.
ನಗರದ ಹೃದಯ ಭಾಗವಾದ ಎನ್.ಆರ್. ವೃತ್ತದ ಬಳಿ ನಿರ್ಗತಿಕ ಮಹಿಳೆಯನ್ನು ಕಳೆದ ಒಂದು ದಿನದ ಹಿಂದೆ ರಾತ್ರಿ ವೇಳೆ ಬರ್ಬರವಾಗಿ ಕೊಲೆ ಮಾಡಲಾಗಿದೆ. ಇಷ್ಟಕ್ಕೆ ಸುಮ್ಮನಾಗದ ಕಾಮುಕನು ಹತ್ಯೆಗೈದ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಇಂತಹ ವಿಕೃತ ಕಾಮಿಯನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಕೊಲೆಯಾದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡಿವೆ. ಇದು ಮಾನವ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಸಂಬಂಧಪಟ್ಟ ಅಧಿಕಾರಿಗಳು ಅತ್ಯಾಚಾರಿಯನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸಬೇಕು. ಜೊತೆಗೆ ರಾತ್ರಿ ವೇಳೆ ಪೊಲೀಸ್ ಗಸ್ತು ಹೆಚ್ಚಿಸಬೇಕೆಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಲಾಯಿತು.