ಹಾಸನ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ತುಂಬಾ ಮುಖ್ಯ. ಇಂತಹ ಘಟನೆಗಳು ಮತ್ತೆ ನಡೆಯಬಾರದು. ಮಾಧ್ಯಮ ಮತ್ತು ಅಮಾಯಕರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಹೇಳಿದ್ದಾರೆ.
ಹೊಳೆನರಸೀಪುರದಲ್ಲಿ ನಡೆದ ಕೋವಿಡ್ -19 ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಆದರೆ ಘಟನೆ ನಡೆದಿರುವುದು ಮಾತ್ರ ಖಂಡನೀಯ. ಕೆ. ಜಿ. ಹಳ್ಳಿ ಪ್ರಕರಣದಲ್ಲಿ ಯಾರು ತಪ್ಪು ಮಾಡಿದ್ದಾರೆ ಎಂಬುದನ್ನು ಆದಷ್ಟು ಬೇಗ ಪತ್ತೆ ಹಚ್ಚಲಿ. ಈ ಕುರಿತು ಉನ್ನತ ಮಟ್ಟದಲ್ಲಿ ತನಿಖೆ ಆಗಿ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂಬುದು ನನ್ನ ಆಗ್ರಹ ಎಂದರು.
ಪತ್ರಕರ್ತರ ಮೇಲೆ ಹಲ್ಲೆ ಮಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ, ಇದು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು. ನಮ್ಮ ಸಂಸ್ಕೃತಿಗೆ ವಿಶಿಷ್ಟ ಸ್ಥಾನಮಾನವಿದೆ. ಭಾರತೀಯ ಸಂಸ್ಕೃತಿಗೆ ಧಕ್ಕೆ ತರುವಂತಹ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಯನ್ನು ಹಾಳು ಮಾಡುವಂತಹ ಕೆಲಸವನ್ನು ಯಾರೂ ಮಾಡಬಾರದು. ಪ್ರಕರಣದ ಬಗ್ಗೆ ನನಗೆ ಸಂಪೂರ್ಣ ಅರಿವಿಲ್ಲ. ಮಾಧ್ಯಮಗಳಲ್ಲಿ ನೋಡಿ ನಾನು ಹೇಳಿದ್ದೇನೆ. ಗಲಭೆ ಪ್ರಕರಣ ಆಗಿರುವುದಕ್ಕೆ ಮಾತ್ರ ಖಂಡಿಸುತ್ತೇನೆ ಎಂದು ತಿಳಿಸಿದರು.