ಹಾಸನ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ. ಆದರೆ, ಹೊಳೆನರಸೀಪುರ ಕ್ಷೇತ್ರದಿಂದ ಮಾತ್ರ ಸ್ಪರ್ಧೆ ಮಾಡುವುದಿಲ್ಲ ಎಂದು ಹೊಳೆನರಸೀಪುರ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಬಿ.ಪಿ. ಮಂಜೇಗೌಡ ಹೇಳಿದ್ದಾರೆ.
ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಟಿಕೆಟ್ ತಪ್ಪಿದರೂ ಬೇಜಾರಿಲ್ಲ. ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡದಿದ್ದರು ಚಿಂತೆಯಿಲ್ಲ. ಆದರೆ, ಹೊಳೆನರಸೀಪುರ ಕ್ಷೇತ್ರಕ್ಕೆ ಮಾತ್ರ ಹೋಗುವುದಿಲ್ಲ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದ 418 ಹಳ್ಳಿ ಸುತ್ತಾಡಿದ್ದೇನೆ. ಅಲ್ಲಿನ ಜನರಿಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ. ಮುಂದಿನ ದಿನಗಳಲ್ಲಿ ನಮ್ಮ ನಾಯಕರು ಹೊಳೆನರಸೀಪುರ ಕ್ಷೇತ್ರಕ್ಕೆ ಬಂದು ಪಕ್ಷ ಸಂಘಟನೆ ಮಾಡಿದರೆ ಕಾಂಗ್ರೆಸ್ ಗೆಲ್ಲುವುದರಲ್ಲಿ ಎರಡು ಮಾತಿಲ್ಲ. ಅಂತಹ ಸಂದರ್ಭವೂ ಬರುತ್ತದೆ ಎಂದರು.
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾವು ಯಾರೊಂದಿಗೂ ಕೈ ಜೋಡಿಸುವುದಿಲ್ಲ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದು, ಜಿಲ್ಲೆಯಲ್ಲಿಯೂ ಕೂಡ ಏಕಾಂಗಿಯಾಗಿ ನಾವು ಸ್ಪರ್ಧಿಸುತ್ತೇವೆ. ಕಾಂಗ್ರೆಸ್ ಗೆಲುವಿಗಾಗಿ ಎಲ್ಲರೂ ಶ್ರಮ ವಹಿಸುತ್ತೇವೆ. ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಸಾಮೂಹಿಕ ನಾಯಕತ್ವದಡಿ ಪಕ್ಷ ಸಂಘಟಿಸಲು ಪಕ್ಷದ ವರಿಷ್ಠರು ಸೂಚಿಸಿದ್ದಾರೆ. ಅದರಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.
ಓದಿ: ಸಿಂಘು ಗಡಿಯಲ್ಲಿ ರೈತರ ಪ್ರತಿಭಟನೆ ವೇಳೆ ಘರ್ಷಣೆ : 44 ಜನರ ಬಂಧನ
ಹಾಸನ ನಗರದಲ್ಲಿ ರೈಲ್ವೆ ಮೇಲ್ಸೆತುವೆ ಕಾಮಗಾರಿ ಇನ್ನೂ ಚುರುಕು ಪಡೆದುಕೊಂಡಿಲ್ಲ. ಇದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಮನವಿ ಮಾಡಿಕೊಂಡಿದ್ದೆವು. ಹಿಂದೆ ಪ್ರತಿಭಟನೆ ಕೂಡ ನಡೆಸಲಾಗಿತ್ತು. ರೈಲ್ವೆ ಮೇಲ್ಸೆತುವೆ ಕಾಲಮಿತಿಯಲ್ಲಿ ಮುಗಿಸದಿದ್ದರೆ, ಹೋರಾಟ ಅನಿವಾರ್ಯವಾಗುತ್ತದೆ ಎಂದು ಎಚ್ಚರಿಸಿದರು.
ಹಾಸನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವ ಕೆಲಸಗಳೂ ಪ್ರಗತಿ ಕಾಣುತ್ತಿಲ್ಲ. ಬಿ.ಎಂ. ರಸ್ತೆ ಕಾಮಗಾರಿ ಕೂಡ ಪ್ರಗತಿ ಕಂಡಿರುವುದಿಲ್ಲ. ಬಾಳ್ಳುಪೇಟೆಯಿಂದ ಸಕಲೇಶಪುರವರೆಗಿನ ರಸ್ತೆ ಕಾಮಗಾರಿ ವಿಳಂಬವಾಗುತ್ತಿರುವುದನ್ನು ಸಹಿಸಲು ಸಾಧ್ಯವೇ ಇಲ್ಲ. ಇದಕ್ಕೆಲ್ಲಾ ಯಾರು ಹೊಣೆ? ರಾಜ್ಯ ಬಿಜೆಪಿ ಸರ್ಕಾರ ಜಿಲ್ಲೆಗೆ ಮಲತಾಯಿ ಧೋರಣೆ ಮಾಡುತ್ತಿದೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಕೂಡ ಬಿಡುಗಡೆ ಮಾಡುತ್ತಿಲ್ಲ. ಈ ಬಗ್ಗೆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದರು.