ಹಾಸನ: ಕನ್ನಡ ರಾಜ್ಯೋತ್ಸವ ದಿನಾಚರಣೆ ಸಮಿತಿಯಿಂದ ಶುಕ್ರವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 64ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಶ್ರೀ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು.
ಕನ್ನಡ ಭಾಷೆಗೆ ಸುಮಾರು 3 ಸಾವಿರ ವರ್ಷಗಳ ಇತಿಹಾಸವಿದೆ. ಕ್ರಿ.ಪೂ.2ನೇ ಶತಮಾನದಲ್ಲಿ ಕನ್ನಡ ಭಾಷೆ ಸಾಹಿತ್ಯ ಇತ್ತೆಂದು ವಿದ್ವಾಂಸರು ಪ್ರತಿಪಾದಿಸಿದ್ದಾರೆ. ನಂತರ ಹಂತ ಹಂತವಾಗಿ ವಿವಿಧ ಸ್ವರೂಪದಲ್ಲಿ ನಮ್ಮ ಭಾಷೆ, ಸಂಸ್ಕೃತಿ, ಪರಂಪರೆಗಳು ಬೆಳೆದು ಬಂದಿದ್ದು, 8 ಜ್ಞಾನಪೀಠ ಪ್ರಶಸ್ತಿಗಳು ನಮ್ಮ ಸಾಹಿತ್ಯದ ಶ್ರೀಮಂತಿಕೆಗೆ ಸಾಕ್ಷಿಯಾಗಿವೆ ಎಂದು ವಿವರಿಸಿದರು. ಅಲ್ಲದೇ, ಜಿಲ್ಲೆಯ ಪ್ರವಾಹದಿಂದ ಪ್ರಾಣ ಹಾನಿ ಸೇರಿದಂತೆ ಬೆಳೆ ನಷ್ಟದಿಂದ ಸುಮಾರು 225 ಕೋಟಿ ರೂಪಾಯಿಗಳಿಗೂ ಅಧಿಕ ನಷ್ಟವಾಗಿದೆ. ಪ್ರಕೃತಿ ವಿಕೋಪ ಹಾನಿಯಿಂದಾಗಿರುವುದಕ್ಕೆ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಈಗಾಗಲೇ15 ಕೋಟಿ ಬಿಡುಗಡೆ ಮಾಡಿದೆ ಜಿಲ್ಲಾಧಿಕಾರಿ ತಿಳಿಸಿದರು.
ಸಕಲೇಶಪುರ ಪಟ್ಟಣದ ಸುಭಾಷ್ ಮೈದಾನದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಸಕಲೇಶಪುರ ಶಾಸಕ ಹೆಚ್.ಕೆ. ಕುಮಾರಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಕನ್ನಡದ ಮೇಲಿನ ಪ್ರೀತಿ ಕೇವಲ ನವೆಂಬರ್ 1ಕ್ಕೆ ಮಾತ್ರ ಸೀಮಿತವಾಗಬಾರದು. ಭಾಷೆ ನೆಲ ಜಲದ ಉಳಿವಿಗಾಗಿ ಹೋರಾಟ ಮಾಡಬೇಕಾಗಿರುವುದು ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವೆಂದು ಹೇಳಿದ್ರು.
ಇನ್ನು ಬೇಲೂರಿನ ಸರ್ಕಾರಿ ಪದವಿಪೂರ್ವ ಕಾಲೇಜ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಿ, ಕನ್ನಡದ ಹೋರಾಟವನ್ನು ಕೇವಲ ಸಂಘಟನೆಗಳು ಮಾಡಿದರೆ ಸಾಲದು. ಪ್ರತಿಯೊಬ್ಬ ಕನ್ನಡಿಗನೂ ಸಹ ಹೋರಾಟದ ಮನೋಭಾವವನ್ನು ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಲಿಂಗೇಶ್ ಹೇಳಿದರು. ಇದೇ ಸಂದರ್ಭದಲ್ಲಿ ಕನ್ನಡ ನಾಡು ನುಡಿಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದಂತಹ ಹಲವು ಸಾಧಕರರಿಗೆ ತಾಲೂಕು ಆಡಳಿತದಿಂದ ಸನ್ಮಾನಿಸಲಾಯ್ತು. ಅಲ್ಲದೇ ಇದೇ ಸಂದರ್ಭದಲ್ಲಿ ವಿವಿಧ ರೀತಿಯ ಸ್ತಬ್ಧ ಚಿತ್ರಗಳ ಪ್ರದರ್ಶನಕ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.