ಹಾಸನ: ನಗರದ ಹೊರವಲಯದಲ್ಲಿ ಉದ್ದೇಶಿತ ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪ್ರಾರಂಭವಾಗಲಿದ್ದು ಅದಕ್ಕೆ ಅಗತ್ಯವಿರುವ ಸಂಪೂರ್ಣ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು ಜಿಲ್ಲೆಯ ಕೋವಿಡ್ ಸ್ಥಿತಿಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕೊರೊನಾ ಸೋಂಕಿನ ಪಾಸಿಟಿವಿಟಿ ದರ ಶೀಘ್ರವಾಗಿ 5 ಕ್ಕಿಂತ ಕಡಿಮೆಗೆ ತರಲು ಜನಪ್ರತಿನಿಧಿಗಳು, ಅಧಿಕಾರಿಗಳು ಶ್ರಮಿಸುವುದಾಗಿ ಹೇಳಿದ್ದು, ಹೇಮಾವತಿ ಜಲಾಶಯ ಸಂತ್ರಸ್ತರ ಭೂಮಿಯನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡಿರುವವರ ಬಗ್ಗೆ ತನಿಖೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಇನ್ನು ಎತ್ತಿನಹೊಳೆ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರಿಗೆ ನೀಡಲು ಹಣ ಲಭ್ಯವಿದೆ. 43 ಕೋಟಿ ರೂ.ಗಳನ್ನು ಭೂ ಪರಿಹಾರಕ್ಕೆ ಬಿಡುಗಡೆ ಮಾಡಲಾಗಿದೆ. ಶೀಘ್ರವೇ 108 ಕೋಟಿ ರೂ. ನೀಡುವುದಾಗಿ ಭರವಸೆ ನೀಡಿ, ಹಣಕಾಸಿನ ಲಭ್ಯತೆಯ ಇತಿಮಿತಿಯಲ್ಲಿ ಜಿಲ್ಲೆಯಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಅಭಿವೃದ್ದಿ ದೃಷ್ಟಿಯಿಂದ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ರೇವಣ್ಣ ಜೊತೆಗೆ ಚರ್ಚಿಸಿ ಉಳಿದ ಕೆಲಸಗಳನ್ನು ಪರಿಶೀಲಿಸಿ ಹಂತ ಹಂತವಾಗಿ ಮುಕ್ತಾಯಗೊಳಿಸಲಾಗುವುದು ಎಂದರು.
ಸಕಲೇಶಪುರ ಹಾಗೂ ಆಲೂರು ಭಾಗದಲ್ಲಿ ಕಾಡಾನೆ ಹಾವಳಿ ಸಮಸ್ಯೆ ಇದ್ದು, ಆದಷ್ಟು ಬೇಗ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ವಿದ್ಯಾಸಂಸ್ಥೆಗಳು ಪ್ರವೇಶಾತಿ ಹೆಸರಲ್ಲಿ ಪೋಷಕರಿಗೆ ಕಿರುಕುಳ ನೀಡಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾತನಾಡಿ, ಸದ್ಯದಲ್ಲೇ ರಾಜ್ಯಕ್ಕೆ 80 ಲಕ್ಷ ಲಸಿಕೆ ಬರಲಿದೆ. ಹಾಸನ ಜಿಲ್ಲೆಗೆ ಜನಸಂಖ್ಯೆ ಆಧಾರದ ಮೇಲೆ ಅಧಿಕ ಲಸಿಕೆ ಪೂರೈಸಲಾಗುವುದು ಹಾಗೂ ಕೋವಿಡ್ ಮೂರನೇ ಅಲೆಗೆ ಸಿದ್ಧತೆಗಳು ಪ್ರಾರಂಭವಾಗಿದ್ದು ಪ್ರತಿ ಜಿಲ್ಲೆಗೆ 70-80 ಐ.ಸಿ.ಯು ವೆಂಟಿಲೇಟರ್, ಪ್ರತ್ಯೇಕ ಮಕ್ಕಳ ವಾರ್ಡ್ ವ್ಯವಸ್ಥೆ ಮಾಡಲಾಗುತ್ತದೆ ಎಂದರು.