ಹಾಸನ: ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು ಕೊರೊನಾಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ.
ಮೃತ ವ್ಯಕ್ತಿ ಹಾಸನ ನಗರದ ಕೆಎಸ್‌ಆರ್‌ಟಿಸಿಯಲ್ಲಿ ಕೊರೊನಾ ವಾರಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಉಸಿರಾಟ ಮತ್ತು ಮಧುಮೇಹದ ತೊಂದರೆಯಿಂದ ಬಳಲುತ್ತಿದ್ದರು. ಕರ್ತವ್ಯದ ವೇಳೆ ಹೆಚ್ಚು ಉಸಿರಾಟದ ತೊಂದರೆ ಕಂಡುಬಂದಿದ್ದು ಕೋವಿಡ್ ಪರೀಕ್ಷೆ ನಡೆಸಿ, ಬಳಿಕ ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ಎರಡು ದಿನಗಳ ಹಿಂದೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಅದರೆ ಹೆಚ್ಚಿನ ಚಿಕಿತ್ಸೆಗೆ ಸ್ಪಂದಿಸಿದ ಅವರು ಇಂದು ಕೊನೆಯುಸಿರೆಳೆದಿದ್ದು, ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ನಾಲ್ವರು ಕೊರೊನಾ ವಾರಿಯರ್ಸ್‌ಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.