ಅರಕಲಗೂಡು: ಮಾದಕ ವಸ್ತುಗಳ ವ್ಯಸನ ಶಿಕ್ಷಾರ್ಹ ಅಪರಾಧ. ಮಕ್ಕಳು ಹಾಗೂ ಯುವಕರು ಇದರ ದಾಸರಾಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಸಾಮಾಜಿಕ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರಚಾರ ಕಾರ್ಯಕ್ರಮ ಮಾಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸ್ವಾಮಿಗೌಡ ತಿಳಿಸಿದರು.
ಮಾದಕ ವಸ್ತು ಬಳಕೆಯಿಂದಾಗುವ ಹಾನಿ ಕುರಿತ ಜಾಗೃತಿ ಕಾರ್ಯಕ್ರಮಕ್ಕೆ ಇವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಶಿಕ್ಷಣಾಧಿಕಾರಿ ಕಾಂತಾಮಣಿ, ಕೆಲವರು ಮಾದಕ ವಸ್ತುಗಳ ವ್ಯಸನಕ್ಕೆ ಮಾರು ಹೋಗುತ್ತಿರುವುದರಿಂದ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗುವುದರ ಜೊತೆಗೆ ಕುಟುಂಬದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಇದನ್ನು ಬಳಕೆ ಮಾಡುವುದು ಶಿಕಾರ್ಹ ಅಪರಾಧ ಎಂದು ತಿಳಿಸಿದರು.
ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಣೆ ವಿರೋಧಿ ದಿನದ ನಿಮಿತ್ತ ವಾಹನದಲ್ಲಿ ಭಿತ್ತಿಚಿತ್ರ ಅಳವಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ವಾಹನವು ತಾಲೂಕಿನಾದ್ಯಂತ ಎಲ್ಲ ಗ್ರಾಮಗಳಲ್ಲಿಯೂ ಸಂಚರಿಸಿ ಧ್ವನಿವರ್ಧಕಗಳ ಮೂಲಕ ಹಾಗೂ ಭಿತ್ತಿ ಪತ್ರಗಳನ್ನು ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದೆ ಎಂದು ತಿಳಿಸಿದರು.