ಹಾಸನ: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆ ರದ್ದುಪಡಿಸಿ, ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಖಾಯಂಗೊಳಿಸಲು ಆಗ್ರಹಿಸಿ ಕಳೆದ 9 ವಾರಗಳಿಂದಲೂ ಹೋರಾಟ ನಡೆಸುತ್ತಿದ್ದು, ಇಂದು ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರುಗಳು ಡಿಸಿ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದರು.
ರಾಜ್ಯದ 412 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14564 ಅತಿಥಿ ಉಪನ್ಯಾಸಕರು ಕನಿಷ್ಟ ವೇತನ ಪಡೆದು ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಕೋವಿಡ್ ಸಂಕಷ್ಟದ ಈ ದಿನಗಳಲ್ಲಿ 6 ತಿಂಗಳಿಂದ ವೇತನವಿಲ್ಲದೆ ತೀವ್ರ ಸಂಕಷ್ಟ ಎದುರಿಸುತ್ತಿದ್ದೇವೆ. ಈ ಮಧ್ಯೆ ಗಾಯದ ಮೇಲೆ ಬರೆ ಎಂಬಂತೆ ಕಾಲೇಜು ಶಿಕ್ಷಣ ಇಲಾಖೆ ಹೊಸದಾಗಿ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಜುಲೈ 7 ರಂದು ಅಧಿಕೃತ ಗೆಜೆಟ್ ನೋಟಿಫಿಕೇಷನ್ ಹೊರಡಿಸಿದೆ. ಇದರಿಂದ 2400ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ ಎಂದರು.
ಪ್ರಸ್ತುತ ನೇಮಕಾತಿ ಅಧಿಸೂಚನೆ ರದ್ದುಪಡಿಸಿ, ಸೇವೆಯಲ್ಲಿರುವ ಅತಿಥಿ ಉಪನ್ಯಾಸಕರುಗಳಿಗೆ ಉದ್ಯೋಗ ಭದ್ರತೆ ನೀಡುವ ಅಂಶಗಳನ್ನು ತಾವು ಮಾನವೀಯ ದೃಷ್ಟಿಯಿಂದ ಪರಿಗಣಿಸಿ, ಕೋವಿಡ್ ಸಂಕಷ್ಟದಿಂದ ನಲುಗಿ ಹೋಗಿರುವ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ ಘೋಷಿಸುವ ನಿಟ್ಟಿನಲ್ಲಿ ಐತಿಹಾಸಿಕ ತೀರ್ಮಾನಕ್ಕೆ ಬರಬೇಕೆಂದು ಒತ್ತಾಯಿಸಿ ಕಳೆದ 8 ವಾರಗಳಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.