ಹಾಸನ: ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಪ್ರಕಟವಾಗುವ ದಿನಗಳು ಹತ್ತಿರವಾಗುತ್ತಿದ್ದು, ಈಗಾಗಲೇ ರಾಜ್ಯ ಚುನಾವಣಾ ಆಯೋಗ ನೀಡಿದ ನಿರ್ದೇಶನದಂತೆ ಜಿಲ್ಲಾ ಚುನಾವಣಾ ಅಧಿಕಾರಿಗಳು ಅಂತಿಮ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿದ್ದು, ಜಿಲ್ಲೆಯ 255 ಗ್ರಾಮ ಪಂಚಾಯಿತಿಗೆ ಚುನಾವಣೆ ನಡೆಯಲಿದೆ.
ಗ್ರಾಪಂ ಚುನಾವಣೆ ರಾಜಕೀಯ ಪಕ್ಷದ ಚಿಹ್ನೆ ಅಡಿಯಲ್ಲಿ ನಡೆಯದೆ ಇದ್ದರೂ, ಜಿಲ್ಲೆಯ ಮೂರು ಪ್ರಬಲ ಪಕ್ಷಗಳು ಈಗಾಗಲೇ ಪ್ರತಿ ಗ್ರಾಮ ಪಂಚಾಯಿತಿ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮತ್ತು ಸೂಕ್ತ ಅಭ್ಯರ್ಥಿ ಯಾರು ಎಂಬುದರ ಕಸರತ್ತನ್ನು ತೆರೆಮರೆಯ ಹಿಂದೆಯೇ ನಡೆಸುತ್ತಿವೆ. ಈಗಾಗಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮೂರೂ ಪಕ್ಷಗಳು ಸಿದ್ಧತೆ ಮಾಡಿಕೊಂಡಿವೆ.
ಸದ್ಯ ಹಾಸನ ಜಿಲ್ಲೆಯಲ್ಲಿ 11,43,017 ಮಂದಿ ಮತದಾರರು ಈ ಬಾರಿ ಹಕ್ಕು ಚಲಾಯಿಸಲು ಅರ್ಹತೆ ಪಡೆದಿದ್ದಾರೆ. ಜಿಲ್ಲೆಯಲ್ಲಿರುವ ಒಟ್ಟು 267 ಗ್ರಾಪಂ ಪೈಕಿ 255 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ. ಇನ್ನು ಉಳಿದ 12 ಗ್ರಾಪಂಗಳ ಅಧಿಕಾರಾವಧಿ ಡಿಸೆಂಬರ್ಗೆ ಮುಕ್ತಾಯಗೊಳ್ಳಲಿದೆ.
ಹಾಸನ ಜಿಲ್ಲೆ ಜೆಡಿಎಸ್ ಪಕ್ಷದ ಭದ್ರಕೋಟೆ ಎಂಬುದು ಗೊತ್ತಿರುವಂತಹ ವಿಚಾರ. ಈಗಾಗಲೇ 7 ವಿಧಾನಸಭಾ ಕ್ಷೇತ್ರಗಳಲ್ಲಿ, ಹಾಸನ ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಜೆಡಿಎಸ್ ಶಾಸಕರಿದ್ದಾರೆ. ಇದಲ್ಲದೆ ಜಿಲ್ಲೆಗೆ ಜೆಡಿಎಸ್ ಪಕ್ಷದ ಕೊಡುಗೆ ಸಾಕಷ್ಟಿದೆ. ಆದರೆ ಈ ಬಾರಿ ಹಾಸನ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಇರುವುದರಿಂದ ಮತ್ತು ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಇರುವುದರಿಂದ ಮತದಾರರು ಯೋಚಿಸಿ ಮತ ಚಲಾಯಿಸುವ ಸಂದರ್ಭ ಸೃಷ್ಟಿಯಾಗಿದೆ.