ಚನ್ನರಾಯಪಟ್ಟಣ(ಹಾಸನ): ಉಸ್ತುವಾರಿ ಸಚಿವರಾದ ಮೇಲೆ ಮೊದಲ ಬಾರಿಗೆ ಜಿಲ್ಲೆಗೆ ಭೇಟಿ ನೀಡಿದ ಗೋಪಾಲಯ್ಯ, ಹಾಸನ ಜಿಲ್ಲೆಯನ್ನು ಇನ್ನಷ್ಟು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಭರವಸೆ ನೀಡಿದರು.
ಅಹಾರ ಖಾತೆ ಸಚಿವ ಗೋಪಾಲಯ್ಯರನ್ನು ಹಿರೀಸಾವೆ ಜನ 135 ಕೆಜಿಯ ಸೇಬಿನ ಹಾರ ಹಾಕುವ ಮೂಲಕ ಅದ್ಧೂರಿಯಾಗಿ ಸ್ವಾಗತಿಸಿದರು. ಸಚಿವ ಗೋಪಾಲಯ್ಯ ಹಿರೀಸಾವೆಯ ಗಡಿ ಭಾಗದಲ್ಲಿರುವ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ನಮ್ಮ ನಾಯಕ ಯಡಿಯೂರಪ್ಪ ನನ್ನ ಮೇಲೆ ವಿಶ್ವಾಸ ಇಟ್ಟು ಸಚಿವ ಸ್ಥಾನ ಕೊಟ್ಟಿದ್ದಾರೆ. ನನ್ನನ್ನು ಹಾಸನ ಜಿಲ್ಲೆಯ ಉಸ್ತುವಾರಿ ಸಚಿವನನ್ನಾಗಿ ನೇಮಿಸಿ ಇಲ್ಲಿನ ಅಭಿವೃದ್ಧಿ ಜವಾಬ್ದಾರಿ ವಹಿಸಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರ ಸಲಹೆ ಪಡೆದು, ಎಲ್ಲಾ ಚುನಾಯಿತ ಪ್ರತಿನಿಧಿಗಳ ಸಹಕಾರದಿಂದ ಈಗಾಗಲೇ ಸಾಕಷ್ಟು ಅಭಿವೃದ್ಧಿ ಹೊಂದಿರುವ ಹಾಸನ ಜಿಲ್ಲೆಯಲ್ಲಿ ಇನ್ನಷ್ಟು ಉತ್ತಮ ಕಾರ್ಯಗಳನ್ನು ಮಾಡಲು ಪ್ರಯತ್ನಿಸುತ್ತೇನೆ ಎಂದರು.
ಇನ್ನು ಮುಂದೆ ನಾನು ವಾರದಲ್ಲಿ ಎರಡು ದಿನ ಜಿಲ್ಲೆಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸುತ್ತೇನೆ. ಅಭಿವೃದ್ಧಿಗೆ ಎಲ್ಲರೂ ಒಟ್ಟಾಗಿ ಸಾಗಬೇಕು. ಹೀಗಾಗಿ ನನ್ನ ಆದ್ಯತೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು. ನಂತರ ಸಾಯಿ ಬಾಬಾ ಆಶ್ರಮಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಸ್ವಾಮೀಜಿಗಳಿಂದ ಆಶೀರ್ವಾದ ಪಡೆದು ಜಿಲ್ಲಾ ಪ್ರವಾಸಕ್ಕೆ ಮುಂದಾದರು.