ಹಾಸನ: ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ತಾಯಿಯ ದರ್ಶನವನ್ನು ಇಂದು ಮಾಜಿ ಸಚಿವ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ಜೊತೆ ಬಂದು ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು. ಪ್ರತಿವರ್ಷವೂ ಕೂಡ ಆಶ್ವೀಜ ಮಾಸದ ಎರಡನೇ ದಿನ ರೇವಣ್ಣ ಪೂಜೆ ಸಲ್ಲಿಸುವುದು ವಿಶೇಷ.
ಆಶ್ವೀಜ ಮಾಸದ ಮೊದಲ ಗುರುವಾರ ಅಂದರೆ ನಿನ್ನೆ ಈ ವರ್ಷದ ದರ್ಶನಕ್ಕೆ ವಿದ್ಯುಕ್ತ ಚಾಲನೆ ದೊರಕಿದ್ದು, ಕೊರೊನಾ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮತ್ತು ಆಹ್ವಾನ ಪತ್ರಿಕೆಯನ್ನು ನೀಡಿದ ಗಣ್ಯರಿಗೆ ಮಾತ್ರ ದರ್ಶನಕ್ಕೆ ಜಿಲ್ಲಾಡಳಿತ ಅವಕಾಶ ನೀಡಿತ್ತು .
ಮಾಜಿ ಸಚಿವ ರೇವಣ್ಣ ಮತ್ತು ಜಿಲ್ಲಾ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಸಿದ್ದೇಶ್ವರ ದೇವಾಲಯದಲ್ಲಿ ಕುಂಕುಮಾರ್ಚನೆ ಮಾಡಿಸಿ ದರ್ಶನ ಪಡೆದು ಹೊರ ಬಂದರು.