ಹಾಸನ: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಸಕಲೇಶಪುರ ಮತ್ತು ಕೊಡಗು ಗಡಿಭಾಗದ ಯಡಕೇರಿ ಸೇತುವೆ ಮುಳುಗಡೆಯಾಗುವ ಭೀತಿ ಎದುರಾಗಿದೆ. ಈ ಹಿನ್ನೆಲೆ ಸುಬ್ರಹ್ಮಣ್ಯ ಹಾಗೂ ಕೊಡಗು ಮಾರ್ಗದ ಸಂಚಾರ ಬಂದ್ ಆಗುವ ಸಾಧ್ಯತೆಯಿದೆ.
ಮೂಡಿಗೆರೆ ಮತ್ತು ಮಲೆನಾಡು ಭಾಗದಿಂದ ಹಾಸನದ ಹೇಮಾವತಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಈ ಭಾಗದ ಜನಜೀವನ ಅಸ್ತವ್ಯಸ್ತವಾಗಿದೆ.
ಯಡಕೇರಿ ಸೇತುವೆ ಮುಳುಗಡೆಯಾದರೆ ಹಲವು ಗ್ರಾಮಗಳ ಸಂಪರ್ಕ ಕಡಿತವಾಗಲಿದೆ. ಹೀಗಾಗಿ ಜಿಲ್ಲಾಡಳಿತ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
ಇದನ್ನೂ ಓದಿ:ಕೊಡಗಿನಲ್ಲಿ ತಗ್ಗದ ವರುಣಾರ್ಭಟ : ಜನ ಜೀವನ ಅಸ್ತವ್ಯಸ್ತ
ಮನೆಗಳಿಗೆ ನೀರು ನುಗ್ಗುವ ಭೀತಿ
ಸಕಲೇಶಪುರ ಮತ್ತು ಮಂಗಳೂರು ಗಡಿ ಭಾಗದ ಮಾರನಹಳ್ಳಿ ಸಮೀಪವಿರುವ ಮನೆಗಳಿಗೆ ಯಾವುದೇ ಕ್ಷಣದಲ್ಲಾದರೂ ನೀರು ನುಗ್ಗುವ ಸಾಧ್ಯತೆಯಿದೆ. ನಿರಂತರ ಮಳೆಯಿಂದಾಗಿ ಎತ್ತಿನಹೊಳೆ ಕಾಮಗಾರಿ ಯೋಜನೆಯಡಿ ಕೆಲಸ ಮಾಡುತ್ತಿರುವ ಕಾರ್ಮಿಕರ ಮನೆಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.
ತಾಲೂಕು ಆಡಳಿತವು ಮನೆಯಲ್ಲಿ ಸಿಲುಕಿರುವ ಕಾರ್ಮಿಕರನ್ನು ರಕ್ಷಣೆ ಮಾಡುವ ಕಾರ್ಯಕ್ಕೆ ಮುಂದಾಗುತ್ತಿದ್ದು, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಿದ್ದಾರೆ.