ಹಾಸನ : ಬೆಂಗಳೂರಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಕಾರ್ಯ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ಆರ್ ಗಿರೀಶ್ ರನ್ನು , ಈಗ ಹಾಸನ ಜಿಲ್ಲಾಧಿಕಾರಿಯಾಗಿ ರಾಜ್ಯ ಸರ್ಕಾರ ನಿಯೋಜನೆ ಮಾಡಿದ್ದು, ನೂತನವಾಗಿ ಅಧಿಕಾರ ಸ್ವೀಕರಿಸಿದ ಅವರು, ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು, ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವುದು ನನ್ನ ಮೊದಲನೆಯ ಆದ್ಯತೆ ಎಂದಿದ್ದಾರೆ.
ಕಳೆದ ನಾಲ್ಕೈದು ತಿಂಗಳಿಂದ ಜಿಲ್ಲಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಅಕ್ರಂ ಪಾಷ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು, ವಾಸ್ತವಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ಆರ್ ಗಿರೀಶ್ ಅವರನ್ನು ನಿಯೋಜನೆ ಮಾಡಲಾಗಿದೆ. ನೂತನ ಡಿಸಿ ಆರ್ ಗಿರೀಶ್ ಇಂದು ಅಧಿಕಾರ ವಹಿಸಿಕೊಂಡಿದ್ದಾರೆ.ಆದರೆ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರನ್ನು ಯಾವುದೇ ಜಾಗ ತೋರಿಸದೆ ವರ್ಗಾವಣೆ ಮಾಡಲಾಗಿದೆ.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಜನರ ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು. ಈಗಾಗಲೇ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ಆಸ್ತಿಪಾಸ್ತಿ ಹಾನಿ ಆಗಿರುವ ಮಾಹಿತಿಯನ್ನು ಅಧಿಕಾರಿಗಳಿಂದ ಪಡೆದಿದ್ದೇನೆ. ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವುದು ನನ್ನ ಮೊದಲನೆಯ ಆದ್ಯತೆ ಎಂದರು.ಈ ಹಿಂದೆ ಚಿತ್ರದುರ್ಗ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿರುವ ಆರ್ ಗಿರೀಶ್ ದಾವಣಗೆರೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ.
2010ನೇ ಸಾಲಿನ ಐಎಎಸ್ ಅಧಿಕಾರಿಯಾಗಿ ನೇಮಕ ಆದವರು. ಜಿಲ್ಲೆಗೆ ಬರುವ ಮುನ್ನ ಜಿಲ್ಲೆಯಲ್ಲಿ ಉಂಟಾಗಿರುವ ಅತಿವೃಷ್ಟಿ-ಅನಾವೃಷ್ಟಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಹಂತವಾಗಿ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು ಎಂದ ಜಿಲ್ಲಾಧಿಕಾರಿ ನನಗೆ ಅವಕಾಶ ಇರುವವರೆಗೆ ಜಿಲ್ಲೆಯ ಜನತೆಯ ಹಿತದೃಷ್ಟಿಯಿಂದ ಶಕ್ತಿಮೀರಿ ಕೆಲಸ ಮಾಡಲಾಗುವುದು ಎಂದರು.ಈ ವೇಳೆ ನೂತನ ಜಿಲ್ಲಾಧಿಕಾರಿ ಕುಟುಂಬದ ಸದಸ್ಯರು ಹಾಗೂ ವಿವಿಧ ಅಧಿಕಾರಿಗಳು ಹಾಜರಿದ್ದರು.