ಹಾಸನ: ಜಿಲ್ಲೆಯಲ್ಲಿ ನಡೆಯುತ್ತಿರುವ ಸಮಾಜಘಾತುಕ ಚಟುವಟಿಕೆಗಳಿಗೆ ಶೀಘ್ರವೇ ಕಡಿವಾಣ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದರು.
ತಮ್ಮ ಕಚೇರಿಯಲ್ಲಿಂದು ಪ್ರಾಯೋಗಿಕವಾಗಿ ನಡೆದ ಫೋನ್ ಇನ್ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯುತ್ತಿರುವ ಅಪರಾಧಗಳು ಹಾಗೂ ಅಕ್ರಮ ಚಟುವಟಿಕೆಗಳ ಕುರಿತು ಸಾರ್ವಜನಿಕರೊಂದಿಗೆ ಮಾಹಿತಿ ಪಡೆಯಲು ಪ್ರಯೋಗಿಕ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಳಗ್ಗೆ 10 ಗಂಟೆಯಿಂದ 11 ಗಂಟೆವರೆಗೆ ನಡೆದ ಕಾರ್ಯಕ್ರಮದಲ್ಲಿ ಸುಮಾರು 18 ಕರೆಗಳು ಬಂದಿದ್ದು, ಹಲವು ಅಕ್ರಮಗಳ ಬಗ್ಗೆ ತಿಳಿಸಿದ್ದಾರೆ ಎಂದರು. ನಮಗೆ ಬಂದ ಕರೆಗಳಲ್ಲಿ ಗಾಂಜಾ ಮಾರಾಟ, ಅಕ್ರಮ ಮದ್ಯ ಮಾರಾಟ, ಬಸ್ ನಿಲುಗಡೆ, ಟ್ರಾಫಿಕ್ ಸಮಸ್ಯೆ ಹೀಗೆ ಅನೇಕ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆಂದು ಮಾಹಿತಿ ನೀಡಿದ್ರು.
ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಇನ್ನೂ 15 ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪೊಲೀಸ್ ಸಿಬ್ಬಂದಿ, ಹಿರಿಯ ಪೊಲೀಸ್ ಅಧಿಕಾರಿಗಳು ಬೀಟ್ ಪೊಲೀಸರಂತೆ ಇನ್ನು ಮುಂದೆ ಕೆಲಸ ಮಾಡಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲಾಗುವುದು. ಇದಕ್ಕೆ ಸಾರ್ವಜನಿಕರು ಸಹ ಪೊಲೀಸರದೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.