ಹಾಸನ: ಹಿಂದಿ ಭಾಷೆ ಹೇರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಸ್ಥಳೀಯ ಕರುನಾಡ ಸೇವಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ದಕ್ಷಿಣ ಭಾರತದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಒತ್ತಾಯ ಪೂರ್ವಕ ಹಿಂದಿ ಹೇರಿಕೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ಕೇಂದ್ರ ಸರ್ಕಾರ ಪ್ರತಿ ವರ್ಷ ಸೆ. 14 ರಂದು ‘ಹಿಂದಿ ದಿವಸ್’ ಎಂದು ಆಚರಣೆ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ. ಇಂತಹ ಆಚರಣೆ ಮಾಡುವುದಾದರೆ ಉತ್ತರ ಭಾರತದ ರಾಜ್ಯಗಳಲ್ಲಿ ಮಾಡಿಕೊಳ್ಳಲಿ. ಆದರೆ ಇತರೆ ರಾಜ್ಯಗಳ ಮೇಲೆ ಹೇರುವುದು ಸರಿಯಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
1ನೇ ತರಗತಿಯಿಂದ 10ನೇ ತರಗತಿಯವರೆಗೂ ಪ್ರಥಮ ಭಾಷೆಯಾಗಿ ಕನ್ನಡವನ್ನೇ ಕಲಿಸಬೇಕು. ಮುಂದಿನ ದಿನಗಳಲ್ಲಿ ಹಿಂದಿ ದಿವಸ್ ಆಚರಣೆ ದಕ್ಷಿಣ ಭಾರತದ ರಾಜ್ಯಗಳಿಗೆ ಕಡ್ಡಾಯವಾಗಬಾರದು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.