ಅರಕಲಗೂಡು(ಹಾಸನ): ಮಲೇರಿಯಾ ಮಾಸಾಚರಣೆ ಪ್ರಯುಕ್ತ ಇಂದು ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನು ತಾಲೂಕು ದಂಡಾಧಿಕಾರಿಗಳಾದ ವೈ.ಎಮ್. ರೇಣುಕುಮಾರ್ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿಯಲ್ಲಿ ನಡೆಸಲಾಯಿತು.
ತಾಲೂಕು ಆರೋಗ್ಯಾಧಿಕಾರಿಗಳಾದ ಡಾ. ಸ್ವಾಮಿಗೌಡ ಸಭೆಯ ಅಧ್ಯಕ್ಷರನ್ನು ವಹಿಸಿಕೊಂಡಿದ್ದರು. ಪ್ರತಿ ವರ್ಷದ ಜೂನ್ ತಿಂಗಳಲ್ಲಿ ಮಲೇರಿಯಾ ಮಾಸಾಚರಣೆಯನ್ನು ನಡೆಸಲಾಗುತ್ತದೆ. ಜೂನ್, ಜುಲೈ ತಿಂಗಳಲ್ಲಿ ಮಳೆಗಾಲವಾದ್ದರಿಂದ, ಕೆರೆ, ಕಟ್ಟೆ, ಗುಂಡಿಗಳಲ್ಲಿ ನೀರು ತುಂಬಿ ಸೊಳ್ಳೆ ಉತ್ಪತ್ತಿ ಜಾಸ್ತಿಯಾಗಿ ಮಲೇರಿಯಾ ಕಾಯಿಲೆ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ, ಹಾಗಾಗಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಅರಿವು ಮೂಡಿಸಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದರು.
2025 ರ ವೇಳೆಗೆ ಮಲೇರಿಯಾ ಮುಕ್ತ ಜಿಲ್ಲೆಗಾಗಿ ಎಲ್ಲರೂ ಶ್ರಮಿಸಬೇಕು. ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಚರಂಡಿ ನೀರಿನ ವ್ಯವಸ್ಥೆ, ಸ್ವಚ್ಛತೆ, ಗುಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಅಲ್ಲದೆ ಜನರಿಗೆ ಶುದ್ಧ ನೀರಿನ ಪೂರೈಕೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಷ್ಟೇ ಅಲ್ಲ ಶಾಲೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ, ಶಾಲಾ ಮಕ್ಕಳಿಗೆ ಜಾಗೃತಿ ಮೂಡಿಸಲು ಸೂಚಿಸಿದರು. ಇದೇ ರೀತಿ ಶಿಶು ಅಭಿವೃದ್ಧಿ ಅಧಿಕಾರಿಗಳು, ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಮಲೇರಿಯಾ ನಿರ್ಮೂಲನೆಗೆ ಬೇಕಾದ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.