ಸಕಲೇಶಪುರ : ಬಾಳ್ಳುಪೇಟೆ ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಈಗಾಗಲೇ 3 ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನವನ್ನು ನೀಡಲಾಗುತ್ತದೆ ಎಂದು ಶಾಸಕ ಹೆಚ್ ಕೆ ಕುಮಾರಸ್ವಾಮಿ ತಿಳಿಸಿದರು.
ತಾಲೂಕಿನ ಬಾಳ್ಳುಪೇಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬೇಡ್ಕರ್‌ನಗರ, ಮೆಣಸಮಕ್ಕಿ ಹಾಗೂ ಅರಸು ನಗರದ ಅಂಗನವಾಡಿ ಕಟ್ಟಡಗಳು, ರಾಜೇಂದ್ರಪುರ ಗ್ರಾಮದ ಬಸ್ ತಂಗುದಾಣ, ಬಾಳ್ಳುಪೇಟೆ ವೃತ್ತದಲ್ಲಿ ಹೈಟೆಕ್ ಶೌಚಾಲಯ, ರಾಜೀವ್ ಗಾಂಧಿ ಸೇವಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನ 26 ಗ್ರಾಮ ಪಂಚಾಯತ್‌ಗಳ ಪೈಕಿ ಬಾಳ್ಳುಪೇಟೆ ಪಂಚಾಯತ್ ದೊಡ್ಡದಾಗಿದೆ. ಇಲ್ಲಿ ಶಾಸಕರು ಹಾಗೂ ಜಿಲ್ಲಾ ಪಂಚಾಯತ್ ಸದಸ್ಯರ ಅನುದಾನದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ ಎಂದರು.
ಬಾಳ್ಳುಪೇಟೆ ಗ್ರಾಮದ ಬಹು ಬೇಡಿಕೆಯ ಸಾರ್ವಜನಿಕ ಶೌಚಾಲಯ ಕಾಮಗಾರಿ ಪೂರ್ಣಗೊಂಡು ಇಂದಿನಿಂದ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ. ಸುಮಾರು 20-30 ವರ್ಷಗಳಿಂದ ಶೌಚಾಲಯ ನಿರ್ಮಾಣ ಸಾಧ್ಯವಾಗಿರಲಿಲ್ಲ. ಗ್ರಾಮಸ್ಥರೋರ್ವರು ಶೌಚಾಲಯ ನಿರ್ಮಾಣಕ್ಕೆ ಭೂಮಿಯನ್ನು ದಾನವಾಗಿ ನೀಡಿದ್ದರ ಫಲವಾಗಿ 6 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ಮೂಲ ಸೌಕರ್ಯಗಳೊಂದಿಗೆ ನಿರ್ಮಾಣ ಮಾಡಲಾಗಿದೆ. ಜನರಿಗೆ ಅತ್ಯಗತ್ಯ ಶೌಚಾಲಯ ಬೇಕಾಗಿದೆ.
ಇದರಿಂದ ಹಲವು ರೋಗಗಳನ್ನು ತಡೆಗಟ್ಟಬಹುದಾಗಿದೆ. ಕೊರೊನಾ ವೈರಸ್ ರಾಜ್ಯದಲ್ಲಿ ಅಟ್ಟಹಾಸ ಮೆರೆಯುತ್ತಿದ್ದು, ಜನರು ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಕರೆ ನೀಡಿದರು.