ಹಾಸನ: ನಗರದ ಗವೇನಹಳ್ಳಿ ಮತ್ತು ದೇವೇಗೌಡ ನಗರದಲ್ಲಿ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ನಗರದ ಗವೇನಹಳ್ಳಿಯ ಶ್ರೀ ಆಂಜನೇಯ ದೇವಸ್ಥಾನ ಮುಂಭಾಗ ಗುದ್ದಲಿ ಪೂಜೆ ನೆರವೇರಿಸಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ರಾಜಘಟ್ಟದಿಂದ ಗವೇನಹಳ್ಳಿ ಮೂಲಕ ಬೈಪಾಸ್ ಸಂರ್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ಕೊಟ್ಟರು. ಇದಾದ ಬಳಿಕ ನಗರದ ಗೊರೂರು ರಸ್ತೆ ಬಳಿ ಇರುವ ದೇವೇಗೌಡ ನಗರದಲ್ಲಿ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ ಈ ಮಾರ್ಗದಿಂದ ಕೃಷ್ಣಾನಗರ ತಲುಪುವ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕರು, ಕೊರೊನಾದಿಂದ ಇಡೀ ದೇಶವೇ ತತ್ತರಿಸಿ ಹೋಗಿದೆ. ಆದರೆ ಅಭಿವೃದ್ಧಿ ವಿಚಾರದಲ್ಲಿ ತೊಂದರೆ ಮಾಡದೆ ನನ್ನ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 45 ಕೋಟಿ ರೂಪಾಯಿ ಅನುದಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಬಿಡುಗಡೆ ಮಾಡಿದ್ದು, ಕಾಮಗಾರಿಗಳಿಗೆ ಚಾಲನೆ ನೀಡಿರುವುದಾಗಿ ಹೇಳಿದರು. ನಗರಸಭೆ ಮತ್ತು ಪಿಡಬ್ಲ್ಯೂಡಿನಿಂದ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಇಂದಿನಿಂದ ಹಾಸನ ವಿಧಾನಸಭಾ ಕ್ಷೇತ್ರ ನಿಜವಾದ ಅಭಿವೃದ್ಧಿ ಕೆಲಸಗಳು ಪ್ರಾರಂಭವಾಗುತ್ತದೆ ಎಂದರು.
ನಗರದ ಸಮೀಪದಲ್ಲೇ ಇರುವ ಗವೇನಹಳ್ಳಿ, ದೇವೇಗೌಡನಗರ, ಕೃಷ್ಣಾನಗರ, ತಟ್ಟೇಕೆರೆ ಹಾಗೂ ಇತರೆ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ನಿಟ್ಟಿನಲ್ಲಿ ನಗರಸಭೆ, ಲೋಕೋಪಯೋಗಿ ಇಲಾಖೆ, ಕಾವೇರಿ ನೀರಾವರಿ ನಿಗಮ ಹಾಗೂ ಜಿಲ್ಲಾ ಪಂಚಾಯತ್ ಸೇರಿದಂತೆ ಒಟ್ಟು ನೂರು ಕೋಟಿ ರೂಪಾಯಿ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಇನ್ನು ಅಮೃತ ಯೋಜನೆಯ ಪೈಪ್ ಲೈನ್ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಡಿಸೆಂಬರ್ ಒಳಗೆ ಕಾಮಗಾರಿಗಳು ಮುಗಿದು ಸಾರ್ವಜನಿಕರಿಗೆ ಕುಡಿಯುವ ನೀರು ಲಭ್ಯವಾಗಲಿದೆ ಎಂದು ಭರವಸೆ ನೀಡಿದರು.