ಹಾಸನ: ನಗರದ ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ಬುಧವಾರ ನಡೆದ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ) ಸಭೆಯಲ್ಲಿ ಸರಿಯಾಗಿ ಮಾಹಿತಿ ನೀಡದ ಅಧಿಕಾರಿಗಳನ್ನು ಮಾಜಿ ಸಚಿವ ಹಾಗೂ ಶಾಸಕ ಹೆಚ್.ಡಿ. ರೇವಣ್ಣ ಮತ್ತು ಸಂಸದ ಪ್ರಜ್ವಲ್ ಇಬ್ಬರೂ ಸೇರಿ ತರಾಟೆಗೆ ತೆಗೆದುಕೊಂಡರು.
ಸಭೆಗೆ ಸರಿಯಾಗಿ ಮಾಹಿತಿ ನೀಡದ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ರೇವಣ್ಣ ಅವರು ತರಾಟೆಗೆ ತೆಗೆದುಕೊಂಡರು. ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಕೂಡಲೆ ಭರ್ತಿ ಮಾಡಲು ಸರ್ಕಾರಕ್ಕೆ ಪತ್ರ ಬರೆಯುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಕೃಷಿ ಇಲಾಖೆ ಅಧಿಕಾರಿಗೆ ಸೂಚನೆ ನೀಡಿದರು.
ಕೃಷಿ ಇಲಾಖೆಗೆ ಕೆಂದ್ರ ಮತ್ತು ರಾಜ್ಯ ಸರ್ಕಾರದಿಂದ 30 ಕೋಟಿ ಅನುದಾನ ಬರುತ್ತದೆ. ರೈತರಿಗೆ ಸರಿಯಾಗಿ ಹಣ ತಲುಪಲು ಸಾಧ್ಯವಾಗುತಿಲ್ಲ. ತೋಟಗಾರಿಕೆ ಇಲಾಖೆಗೆ 30 ಕೋಟಿ ವಾರ್ಷಿಕ ಅನುದಾನ ಬರುತ್ತಿದ್ದು, ಅದನ್ನು ಖರ್ಚು ಮಾಡಲು ಕೇವಲ 12 ಜನ ಸಿಬ್ಬಂದಿಗಳಿದ್ದಾರೆ. ಹಣವು ಸರಿಯಾಗಿ ರೈತರಿಗೆ ತಲುಪುತ್ತಿಲ್ಲ ಎಂದು ಆಕ್ಷೇಪಿಸಿದರು.
ಬೇಲೂರು ಶಾಸಕ ಕೆ.ಎಸ್. ಲಿಂಗೇಶ್ ಮಾತನಾಡಿ, ಬೇಲೂರು ತಾಲ್ಲೂಕಿನಲ್ಲಿ ಕೆಲಸ ಮಾಡುವ ಕೃಷಿ ಇಲಾಖೆ ಹಿರಿಯ ಅಧಿಕಾರಿಗಳ ಮೇಲೆ ಕಿರಿಯ ಅಧಿಕಾರಿಗಳು ಅಟ್ರಾಸಿಟಿ ಪ್ರಕರಣ ದಾಖಲು ಮಾಡಿ ಕಿರುಕುಳ ಕೊಡುತ್ತಿದ್ದು, ಕೂಡಲೇ ಸಭೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಕರೆಸುವಂತೆ ಒತ್ತಾಯಿಸಿದರು.
ಹೊಳೆನರಸೀಪುರ ತಾಲೂಕಿನಲ್ಲಿ ಖಾಸಗಿ ವ್ಯಕ್ತಿಗೆ ಡಯಾಲಿಸಿಸ್ ಮಾಡಲು ಸರ್ಕಾರ ಗುತ್ತಿಗೆ ನೀಡಿದ್ದು, ರೈತರ ಬಳಿ ಹಣ ಪಡೆದು ಡಯಾಲಿಸಿಸ್ ಮಾಡಲಾಗುತ್ತಿದೆ. ಗುತ್ತಿಗೆದಾರರು ಸರ್ಕಾರದ ಹಣ ನುಂಗುತ್ತಿದ್ದಾರೆ ಎಂದು ದೂರಿದರು. ಆರೋಗ್ಯ ಇಲಾಖೆಯ ಆಯುಕ್ತರಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು.