ಹಾಸನ: ಮುಂಬೈನಿಂದ ಬರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೂಡಾ ಏರಿಕೆಯಾಗ್ತಿದೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ದಾಸನಹಳ್ಳಿ ಗ್ರಾಮದ ಪೊಲೀಸ್ ಕಾನ್ಸ್ಟೆಬಲ್ ಒಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಸಂತೋಷ್ ಕುಮಾರ್ ನೇತೃತ್ವದ ಅಧಿಕಾರಿಗಳ ತಂಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಸೀಲ್ ಡೌನ್ ಮಾಡಿದ್ದಾರೆ.
ಬೆಳಗಾವಿ ಗಡಿ ಜಿಲ್ಲೆಯ ನಿಪ್ಪಾಣಿಯಲ್ಲಿ ಕರ್ತವ್ಯಕ್ಕೆ ತೆರಳಿದ್ದ ಅರಸೀಕೆರೆ ಮೂಲದ ಪೊಲೀಸ್ ಒಬ್ಬರಿಗೆ ಪಾಸಿಟಿವ್ ಬಂದಿತ್ತು. ಈ ಹಿನ್ನಲೆಯಲ್ಲಿ ಆತ ಓಡಾಡಿರೋ ದಾಸನಹಳ್ಳಿಯ ರಸ್ತೆಯನ್ನ ಸದ್ಯ ತಾಲೂಕು ಆಡಳಿತ ಸೀಲ್ ಡೌನ್ ಮಾಡಿದೆ.
ಸೀಲ್ ಡೌನ್ ಆದ ಸ್ಥಳಕ್ಕೆ ಜಿಲ್ಲಾ ಪಂಚಾಯ್ತಿ ಸದಸ್ಯ ಪಟೇಲ್ ಶಿವಪ್ಪ ಭೇಟಿ ನೀಡಿ ಪರಿಶೀಲಿಸಿದರು. ಗ್ರಾಮಸ್ಥರಿಗೆ ಎಲ್ಲೂ ಹೊರಗಡೆ ಓಡಾಡದಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾ.ಪಂ. ಇಒ ನಟರಾಜ್, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹುಚ್ಚೇಗೌಡ, ಗ್ರಾಮ ಪಂಚಾಯತ್ ಸದಸ್ಯರಾದ ಮಹಾಲಿಂಗಪ್ಪ, ಬಸವರಾಜು, ಗ್ರಾಮದ ಮುಖಂಡರು ಉಪಸ್ಥಿತರಿದ್ದರು.