ಸಕಲೇಶಪುರ (ಹಾಸನ): ವಾದ್ಯಗೋಷ್ಠಿ ಮತ್ತು ಇತರೆ ಕಲಾವಿದರಿಗೆ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಕರ್ನಾಟಕ ಲಘು ಸಂಗೀತ ಮತ್ತು ಸಾಂಸ್ಕೃತಿಕ ಕಲಾವಿದರ ಸಂಘದ ತಾಲೂಕು ಅಧ್ಯಕ್ಷ ರಮೇಶ್ ಒತ್ತಾಯಿಸಿದ್ದಾರೆ.
ಪಟ್ಟಣದ ಉಪವಿಭಾಗಾಧಿಕಾರಿ ಗಿರೀಶ್ ನಂದನ್‌ರವರಿಗೆ ಸಂಘದ ವತಿಯಿಂದ ಮನವಿ ಸಲ್ಲಿಸಿದ ನಂತರ ಮಾತನಾಡಿ, ಕರ್ನಾಟಕದಲ್ಲಿ ಸುಮಾರು ಐದು ಲಕ್ಷಕ್ಕೂ ಹೆಚ್ಚು ವಿವಿಧ ರೀತಿಯ ವಾದ್ಯಗೋಷ್ಠಿ ಕಲಾವಿದರಿದ್ದಾರೆ. ಬಹುತೇಕರು ಈ ವೃತ್ತಿಯನ್ನು ಬಿಟ್ಟು ಬೇರೆ ಯಾವುದೇ ವೃತ್ತಿಗಳಲ್ಲಿ ತೊಡಗಿಕೊಂಡಿರುವುದಿಲ್ಲ. ಈ ಎಲ್ಲಾ ಕಲಾವಿದರು ಸಾರ್ವಜನಿಕ ಕಾರ್ಯಕ್ರಮವನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದಾರೆ.
ಕೋವಿಡ್ -19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಉಂಟಾಗಿದ್ದರಿಂದ ಕಳೆದ ಆರು ತಿಂಗಳಿಂದ ಕಲಾವಿದರು ಜೀವನ ನಡೆಸಲು ಕಷ್ಟವಾಗಿದೆ. ಕಲಾವಿದರಿಗೆ ಸರ್ಕಾರದಿಂದ ಯಾವುದೇ ಅನುದಾನ ಇಲ್ಲಿಯವರೆಗೂ ಬಂದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಮುಂಬರುವ ಗಣೇಶ ಚತುರ್ಥಿ, ಕನ್ನಡ ರಾಜ್ಯೋತ್ಸವ ಮುಂತಾದ ಸಾರ್ವಜನಿಕ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.