ಹಾಸನ: ಅರಸೀಕೆರೆ ತಾಲೂಕಿನ ಮೈಲನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿದ್ದಾರೆಂದು ಆರೋಪಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.
ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ದಲಿತ ಸಂಘರ್ಷ ಸಮಿತಿಯ ಮುಖಂಡರು ಹಾಗೂ ಕಾರ್ಯಕರ್ತರು ತಾಲೂಕು ಕಚೇರಿವರೆಗೂ ಸಾಗಿದರು. ಈ ಬಗ್ಗೆ ಕೂಡಲೆ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಜುಲೈ 5ರಂದು ಬೆಳಗುಂಬ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಸಿದ್ದಗಂಗಮ್ಮ ಎಂಬುವವರ ಕೊಲೆಯಾಗಿತ್ತು. ಆಕೆಯ ಸಂಬಂಧಿಕರೇ ಹಗ್ಗದಿಂದ ಕುತ್ತಿಗೆ ಬಿಗಿದು, ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಲಿಖಿತ ದೂರು ನೀಡಲಾಗಿತ್ತು. ಆದರೆ ಪೊಲೀಸರು ಓರ್ವ ಆರೋಪಿಯನ್ನ ಮಾತ್ರ ಬಂಧಿಸಿ, ಉಳಿದಿಬ್ಬರು ಆರೋಪಿಗಳನ್ನು ಕೈಬಿಟ್ಟಿದ್ದಾರೆ. ಆರೋಪಿಗಳ ಜತೆ ಪೊಲೀಸರು ಸಹ ಶಾಮೀಲಾಗಿ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪೊಲೀಸರ ಈ ನಿರ್ಲಕ್ಷ್ಯ ಧೋರಣೆ ಖಂಡನೀಯ. ಈ ಬಗ್ಗೆ ಮೇಲಧಿಕಾರಿಗಳು ಗಮನ ಹರಿಸಿ, ಉಳಿದಿಬ್ಬರು ಆರೋಪಿಗಳ ಬಂಧನಕ್ಕೆ ಕೂಡಲೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸಂಘಟನೆಯ ಮುಖಂಡರಾದ ಕೃಷ್ಣಪ್ಪ, ಎಪಿ ಚಂದ್ರಯ್ಯ, ರಾಮು, ಆನಂದ್, ನಾರಾಯಣ ಮೂರ್ತಿ, ಬಾಲಮುರುಗನ್, ರಂಗಸ್ವಾಮಿ, ಹುಲಿಯಪ್ಪ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.