ಹಾಸನ: ಉತ್ತರಪ್ರದೇಶದಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಚಾರ ಮತ್ತು ಕೊಲೆ ನಡೆದ ಹಿನ್ನೆಲೆಯಲ್ಲಿ ಕೂಡಲೇ ಆಡಳಿತವನ್ನು ವಜಾ ಮಾಡುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ನಡೆಸಿ ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕೃತಿ ದಹಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪಂಜಿನ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದಲ್ಲಿ ಕೊನೆಗೊಂಡಿತು. ಅತ್ಯಚಾರ ನಡೆದು ಸಾವಿಗೀಡಾದ ಯುವತಿಯ ಕುಟುಂಬಕ್ಕೆ ಸಾಂತ್ವನ ಹೇಳಲೆಂದು ಉತ್ತರಪ್ರದೇಶಕ್ಕೆ ಭೇಟಿ ನೀಡಲು ಹೋದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿಯವರನ್ನು ಉತ್ತರಪ್ರದೇಶದ ಪೊಲೀಸರು ತಡೆದಿರುವುದನ್ನು ಖಂಡಿಸುತ್ತೇವೆ. ಇಲ್ಲಿನ ಯೋಗಿ ಆದಿತ್ಯನಾಥ್ ಸರ್ಕಾರ ರಾಮ ರಾಜ್ಯದ ಕನಸು ಕಂಡಿರುವುದು ಇದೇನಾ ಎಂದು ಪ್ರಶ್ನೆ ಮಾಡಿದರು.
ಹಗಲಿನ ವೇಳೆಯಲ್ಲಿಯೇ ದಲಿತ ಯುವತಿಯ ಮೇಲೆ ಅತ್ಯಚಾರ, ಕೊಲೆಯಂತಹ ಘಟನೆಗಳು ನಡೆಯುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ ಅವರು, ಉತ್ತರಪ್ರದೇಶದ ಸರ್ಕಾರವು ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳದೆ ಅಪರಾಧ ಎಸಗಿರುವ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿಲ್ಲ. ಸಾಮಾನ್ಯ ಜನರಿಗೆ ರಕ್ಷಣೆ ಇಲ್ಲದಂತಾಗಿದೆ. ಯಾರು ಈ ಅತ್ಯಾಚಾರ ಎಸಗಿದ್ದಾರೆ ಅವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.