ಹಾಸನ: ರೈತ ವಿರೋಧಿ ಭೂ ಸುಧಾರಣಾ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮತ್ತು ಕಾರ್ಮಿಕ ವಿರೋಧಿ ಕಾಯ್ದೆ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಆರ್. ಗಿರೀಶ್ ಆವರಿಗೆ ಮನವಿ ಸಲ್ಲಿಸಲಾಯಿತು.
ಕೊರೊನಾ ದಾಳಿಗೆ ರಾಜ್ಯದ ಜನರು ಸಿಕ್ಕಿ ಜೀವದ ವಿರುದ್ಧ ಹೋರಾಟ ನಡೆಸುತ್ತಿದ್ದರೆ ರಾಜ್ಯ ಬಿಜೆಪಿ ಸರ್ಕಾರವು ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಮುಳುಗಿದೆ. ರಾಜ್ಯ ಆರೋಗ್ಯ ಸೇವೆ ಕುಸಿದು ಬಿದ್ದಿದ್ದು, ಆಸ್ಪತ್ರೆಗಳಲ್ಲಿ ರೋಗಿಗಳು ನರಕಯಾತನೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಗೆ ಸೇರಿದವರು ಲಕ್ಷಾಂತರ ರೂ. ಚಿಕಿತ್ಸೆ ವೆಚ್ಚ ಕಟ್ಟಲಾಗದೆ ಪರದಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಕೋವಿಡ್ ನಿಯಂತ್ರಿಸಲು ಸರ್ಕಾರ ಖರೀದಿಸಿರುವ ಸಾಮಗ್ರಿಗಳಲ್ಲಿ ವ್ಯಾಪಾಕ ಭ್ರಷ್ಟಚಾರ ನಡೆದಿದೆ. ಸರ್ಕಾರವು ಸುಮಾರು 2 ಸಾವಿರ ಕೋಟಿ ರೂ.ಗಳಷ್ಟು ಹಣ ಹೆಚ್ಚಿಗೆ ಪಾವತಿಸಿ ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ಸಾಕಷ್ಟು ನಿದರ್ಶನಗಳಿರುವುದರಿಂದ ತನಿಖೆ ಮಾಡಿಸುವಂತೆ ಒತ್ತಾಯಿಸಿದರು.