ಹಾಸನ: ರೈತ ಮತ್ತು ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಒತ್ತಾಯಿಸಿ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಆಗಸ್ಟ್ 14ರ ಮಧ್ಯಾಹ್ನ 12ಕ್ಕೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಗತಿಪರ-ರೈತಪರ-ಕಾರ್ಮಿಕರ ಪರ ಇರುವ ಕಾಯ್ದೆಗಳನ್ನು ಕರ್ನಾಟಕ ಭೂ ಸುಧಾರಣೆ ಕಾಯ್ದೆ-1961, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ-1966 ಮತ್ತು ಕೈಗಾರಿಕಾ ವ್ಯಾಜ್ಯ ಕಾಯ್ದೆ1947, ಕಾರ್ಖಾನೆ ಕಾಯ್ದೆ-1948 ಹಾಗೂ ಗುತ್ತಿಗೆ ಕಾರ್ಮಿಕರ ನಿಯಂತ್ರಣ ಮತ್ತು ನಿರ್ಮೂಲನೆ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ರೈತ ಮತ್ತು ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿಗಳನ್ನು ಮಾಡಲಾಗಿದೆ.
ಈ ತಿದ್ದುಪಡಿಗಳನ್ನು ಹಿಂತೆಗೆದುಕೊಳ್ಳಲು ಒತ್ತಾಯಿಸಿ, ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಸಂಸದರು, ಶಾಸಕರು, ಜಿ.ಪಂ.ಸದಸ್ಯರು, ಪಕ್ಷದ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಎಲ್ಲಾ ಸೇರಿ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ಮೂಲಕ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಕೊರೊನಾ ಇರುವುದರಿಂದ ಸಾಮಾಜಿಕ ಅಂತರದಲ್ಲಿ ಶಾಂತ ರೀತಿಯಲ್ಲಿ ಪ್ರತಿಭಟನೆ ಮಾಡುವುದಾಗಿ ಹೇಳಿದ ಅವರು ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯಿಂದ ರೈತರ ಬೆಳೆ ನಷ್ಟ ಬಗ್ಗೆ ಮಾಹಿತಿ ಸಂಗ್ರಹಿಸಿ ಸರ್ಕಾರಕ್ಕೆ ಕಳುಹಿಸಿಕೊಡಲು ನಿರ್ಧರಿಸಲಾಗಿದೆ ಎಂದರು.