ಸಕಲೇಶಪುರ: ಪಟ್ಟಣದ ಜನರಿಗೆ ಹೇಮಾವತಿ ನದಿ ನೀರನ್ನು ಶುದ್ಧೀಕರಣ ಮಾಡದೆ ಕಲುಷಿತ ನೀರನ್ನು ನೀಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಗುರುವಾರ ಸಂಘಟನೆಯ ವತಿಯಿಂದ ಪ್ರತಿಭಟನಕಾರರು ಪಟ್ಟಣದ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಪುರಸಭೆವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಮುಖ್ಯಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಕೆಲ ಸಮಯ ಧರಣಿ ಕುಳಿತರು. ಪ್ರತಿಭಟನೆ ವೇಳೆ ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಹರೀಶ್ ಗೌಡ ಮಾತನಾಡಿ, ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು ಜನಪ್ರತಿನಿಧಿಗಳು ಕೇವಲ ಚುನಾವಣೆ ಬಂದಾಗ ಜನಸಾಮಾನ್ಯರ ಬಳಿಗೆ ಬರುತ್ತಾರೆ ಎಂದು ಆರೋಪಿಸಿದರು. ಪಟ್ಟಣದ ಜನರಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.
ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಗಿರೀಶ್ ನಂದನ್, ನಾನು ಇಲ್ಲಿಗೆ ಬಂದು ಅಧಿಕಾರ ವಹಿಸಿಕೊಂಡಾಗ ಶುದ್ಧ ಕುಡಿಯುವ ನೀರಿನ ಘಟಕದ ಯಂತ್ರಗಳು ಹಾಳಾಗಿದ್ದವು. ಶುದ್ಧೀಕರಣ ಯಂತ್ರ ಹಾಳಾಗಿರುವುದರಿಂದ ಜಲಮಂಡಳಿಯ ಅಭಿಯಂತರರನ್ನು ಕರೆಸಿ ಪರಿಶೀಲನೆ ಮಾಡಲಾಗಿದೆ. ಶೀಘ್ರದಲ್ಲಿಯೇ ಯಂತ್ರವನ್ನು ದುರಸ್ತಿ ಮಾಡಿಸಿ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸಲಾಗುವುದು ಎಂದು ಹೇಳಿದರು.
ಎತ್ತಿನಹೊಳೆ ಯೋಜನೆ ವತಿಯಿಂದ ಸುಮಾರು 12 ಕೋಟಿ ವೆಚ್ಚದಲ್ಲಿ ನೂತನ ನೀರು ಶುದ್ಧೀಕರಣ ಘಟಕವನ್ನು ನಿರ್ಮಿಸಲಾಗುತ್ತಿದೆ. ಅಲ್ಲಿವರೆಗೂ ಈಗಿರುವ ಶುದ್ಧೀಕರಣ ಘಟಕವನ್ನು ಸುಸ್ಥಿತಿಯಲ್ಲಿಡಲಾಗುವುದು ಎಂದು ತಿಳಿಸಿದರು.
ಪ್ರತಿಭಟನೆ ವೇಳೆ ಸ್ವಾಭಿಮಾನಿ ಸೇನೆಯ ರಾಜ್ಯ ಕಾರ್ಯದರ್ಶಿ ಮೋಹನ್ ಗೌಡ, ತಾಲೂಕು ಸಂಘಟನಾ ಕಾರ್ಯದರ್ಶಿ ಅಜಿತ್ ಕುಮಾರ್ ಸೇರಿದಂತೆ ಇನ್ನಿತರರು ಇದ್ದರು.