ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನೇ ದಿನೇ ವ್ಯಾಪಕವಾಗಿ ಹರಡುತ್ತಿರುವುದರಿಂದ ಸಾರ್ವಜನಿಕರು ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿದ್ಯುನ್ಮಾನ ಮಾಧ್ಯಮಗಳು, ದಿನಪತ್ರಿಕೆಗಳು ಹಾಗೂ ಕರಪತ್ರಗಳ ಮೂಲಕ ಜಾಗೃತಿ ಮೂಡಿಸುವಂತೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶಿವಣ್ಣ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳೊಂದಿಗೆ ಕೋವಿಡ್ ಕುರಿತು ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಕೋವಿಡ್ ತಡೆಯಲು ಹೆಚ್ಚು ಶ್ರಮಿಸಬೇಕಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳು ಹಾಗೂ ಸೋಂಕಿತರಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದರು.
ಇದೇ ವೇಳೆ, ಕೊರೊನಾ ನಿಯಂತ್ರಿಸುವಲ್ಲಿ ನಿಷ್ಠೆಯಿಂದ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಇಲಾಖೆಯ ಸಿಬ್ಬಂದಿಗೂ ಅವರು ಧನ್ಯವಾದ ತಿಳಿಸಿದರು.
ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ಕೋವಿಡ್ ತಡೆಗಟ್ಟಲು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಹಾಗೂ ಮಾಡಿರುವ ವ್ಯವಸ್ಥೆಗಳ ಕುರಿತು ನ್ಯಾಯಾಧೀಶರಿಗೆ ಪೂರ್ಣ ಮಾಹಿತಿ ನೀಡಿದರು.