ಹಾಸನ: ಶಾಲಾ ಮಕ್ಕಳ ಬದುಕು ಸುಂದರವಾಗಲು ಸರ್ಕಾರಿ ಶಾಲಾ ಕಟ್ಟಡಗಳು ಅತ್ಯುತ್ತಮ ಗುಣಮಟ್ಟ ಹೊಂದಿರಬೇಕು ಎಂದು ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ.ರಾಮಸ್ವಾಮಿ ಅಭಿಪ್ರಾಯಪಟ್ಟರು.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಳ್ಳಿ ಮೈಸೂರು ಹೋಬಳಿಯ ಚಿಕ್ಕ ಕಾಡನೂರು ಗ್ರಾಮದಲ್ಲಿ, ಶಿಕ್ಷಣ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಂಕುಸ್ಥಾಪನೆಯನ್ನು ಅರಕಲಗೂಡು ಶಾಸಕ ಎ.ಟಿ.ರಾಮಸ್ವಾಮಿ ಅವರು ನೆರವೇರಿಸಿ ಬಳಿಕ ಮಾತನಾಡಿದರು.
ನಬಾರ್ಡ್ ವತಿಯಿಂದ 24 ಲಕ್ಷ ರೂ. ವೆಚ್ಚದಲ್ಲಿ 2 ನೂತನ ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಇಂದು ಭೂಮಿ ಪೂಜೆ ನೆರವೇರಿಸಲಾಗಿದ್ದು, ಆದಷ್ಟು ಬೇಗ ಇಲ್ಲಿ ಹೊಸ ಶಾಲಾ ಕೊಠಡಿಗಳು ನಿರ್ಮಾಣವಾಗಲಿದೆ. ಶಾಲಾ ಮಕ್ಕಳ ಬದುಕು ಸುಂದರವಾಗಲು ಸರ್ಕಾರಿ ಕಟ್ಟಡಗಳನ್ನು ಅತ್ಯುತ್ತಮ ಗುಣಮಟ್ಟದಿಂದ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ಇದರ ಜೊತೆಗೆ ಅಧಿಕಾರಿಗಳು, ಗುತ್ತಿಗೆದಾರರು, ಇಂಜಿನಿಯರ್ಗಳು ಮತ್ತು ಗ್ರಾಮಸ್ಥರು ಶಾಲಾ ಕಟ್ಟಡವು ನಮ್ಮ ಕಟ್ಟಡ ಎಂಬ ಮನೋಭಾವದಿಂದ ಅದರ ನಿರ್ಮಾಣದ ಪ್ರತಿಯೊಂದು ಹಂತದಲ್ಲೂ ಗುಣಮಟ್ಟವನ್ನು ಕಾಯ್ದುಕೊಳ್ಳಲು ಸಮರ್ಪಣಾ ಮನೋಭಾವದಿಂದ ದುಡಿಯಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭ ಹೊಳೆನರಸೀಪುರದ ತಹಶೀಲ್ದಾರ್ ಕೆ.ಆರ್.ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಲೋಕೇಶ್, ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯೋಗೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಶ, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಲ್ಲಿಕಾರ್ಜುನ್, ಗ್ರಾಮ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರುಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.