ಹಾಸನ: ಜಿಲ್ಲೆಯಲ್ಲಿ ಯಾವುದೇ ಕೋವಿಡ್-19 ಪ್ರಕರಣಗಳು ದಾಖಲಾಗಿಲ್ಲ. ಜನ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಸ್ಪಷ್ಟಪಡಿಸಿದರು.
ಡಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ನಾವು ಹಲವು ಜಾಗೃತಿ ಕ್ರಮಗಳನ್ನು ಕೈಗೊಂಡಿದ್ದೇವೆ. ವಿದೇಶದಿಂದ ಬಂದಿರುವಂತಹ ಎಲ್ಲರನ್ನೂ ಪರೀಕ್ಷೆಗೊಳಪಡಿಸಿದ್ದು,ಯಾವುದೇ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಜಿಲ್ಲಾ ಪೊಲೀಸ್ ಇಲಾಖೆ ಕೂಡ ನಮ್ಮೊಟ್ಟಿಗೆ ಸಂಪೂರ್ಣ ಸಹಕಾರ ನೀಡಿದೆ. ಸಾರ್ವಜನಿಕರು ಅವರ ವಸ್ತುಗಳನ್ನು ಪೂರೈಕೆ ಮಾಡಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದ್ದು,ಮತ್ತೆ ಹೆಚ್ಚುವರಿಯಾಗಿ 4 ಮಾರುಕಟ್ಟೆಗಳನ್ನು ತೆರೆಯಲಾಗಿದೆ ಎಂದರು.
ಜನ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳುವ ಮೂಲಕ ಸಹಕರಿಸಬೇಕು. ಈಗಾಗಲೇ ಜಿಲ್ಲಾ ಆಸ್ಪತ್ರೆಯನ್ನ ಕೋವಿಡ್-19 ಆಸ್ಪತ್ರೆಯಾಗಿ ಪರಿವರ್ತಿಸಲಾಗಿದೆ. ಜಿಲ್ಲೆಗೆ ರ್ಯಾಪಿಡ್ ಕಿಟ್ಟು ಬರುತ್ತಿದ್ದು, ಅದರ ಮೂಲಕ ಕೇವಲ ಅರ್ಧಗಂಟೆಯಲ್ಲಿ ವರದಿ ಪಡೆಯ ಬಹುದಾಗಿರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಎಲ್ಲ ತಾಲೂಕುಗಳಲ್ಲಿ ನಿರಾಶ್ರಿತ ಕೇಂದ್ರಗಳನ್ನು ತೆರೆಯಲಾಗಿದ್ದು, ಸುಮಾರು 250 ಮಂದಿಗೆ ಅಗತ್ಯ ವಸ್ತುಗಳ ಪೂರೈಕೆ ಮಾಡಲಾಗುತ್ತಿದೆ. ಕಾಫಿ ತೋಟಕ್ಕೆ ಹೊರಗಿನಿಂದ ಬಂದಿರುವ 5,400 ಮಂದಿಗೂ ಎಲ್ಲ ರೀತಿಯ ಅಗತ್ಯ ಸೌಕರ್ಯ ಕಲ್ಪಿಸಿ ಕೊಡಲಾಗಿದೆ ಎಂದರು.
ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಮಾತನಾಡಿ, ಇಂದು ಬೆಳಗ್ಗೆಯಿಂದ ಜಿಲ್ಲಾದ್ಯಂತ ಸುಖಾಸುಮ್ಮನೆ ಓಡಾಡುತ್ತಿದ್ದ ಸುಮಾರು 1,000 ವಾಹನಗಳನ್ನ ವಶಕ್ಕೆ ಪಡೆದಿದ್ದು, ಅವರ ಮೇಲೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ಯುವಕರು ಅನಗತ್ಯವಾಗಿ ಮನೆಯಿಂದ ಹೊರಬಂದು ಬೈಕ್ನಲ್ಲಿ ಓಡಾಡುತ್ತಿರುವುದು ಗಮನಕ್ಕೆ ಬಂದರೆ ಕಠಿಣ ಕ್ರಮ ಜರುಗಿಸುವ ಎಚ್ಚರಿಕೆ ನೀಡಿದರು.