ಹಾಸನ: ಜಿಲ್ಲೆಯ ನಡೆದ ಪ್ರತ್ಯೇಕ ಅಪಘಾತದಲ್ಲಿ ಮೂರು ಮಂದಿ ಸಾವಿಗೀಡಾಗಿದ್ದು, ಇನ್ನೂ ಮೂರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಕಲೇಶಪುರ ತಾಲೂಕಿನ ಹಲ್ಲಹಳ್ಳಿ ಗ್ರಾಮದ ಮನೋಜ್ ಕುಮಾರ್ (24), ಆಲೂರು ತಾಲೂಕು ಬೆಟ್ಟದಹಳ್ಳಿ ಗ್ರಾಮದ ಶಶಾಂಕ್ (25) ಹಾಗೂ ಮಂಡ್ಯ ಜಿಲ್ಲೆ ಕದಬಹಳ್ಳಿ ಗ್ರಾಮದ ಮೋಹನ್ ಕುಮಾರ್ (23) ಮೃತ ದುರ್ದೈವಿಗಳು.
ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 75ರ ಪಟ್ಟಣ ಪುರಸಭೆಯ ಸಮೀಪ ಜೀಪ್ ಮತ್ತು ಆಟೋ ಮುಖಾಮುಖಿಯಾಗಿ ಮನೋಜ್ ಹಾಗೂ ಶಶಾಂಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಸಮೀಪ ಹೊನ್ನೇನಹಳ್ಳಿ ಗ್ರಾಮದ ಬಳಿ ದ್ವಿಚಕ್ರ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಸ್ಥಳದಲ್ಲಿಯೇ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕದಬಳ್ಳಿ ಗ್ರಾಮದ ಮೋಹನ್ ಕುಮಾರ್ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಸಕಲೇಶಪುರ ನಗರ ಹಾಗೂ ಹಿರಿಸಾವೆ ಪೊಲೀಸರು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆ ಶವಾಗಾರಕ್ಕೆ ರವಾನಿಸಿದ್ದಾರೆ. ಇನ್ನು ಗಂಭೀರವಾಗಿ ಗಾಯಗೊಂಡ ಮೂವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಸಕಲೇಶಪುರ ಹಾಗೂ ಹಿರಿಸಾವೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ಇದನ್ನೂ ಓದಿ: ಕೃಷ್ಣಾ ನದಿಯಲ್ಲಿ ಐವರು ಬಾಲಕರ ನಾಪತ್ತೆ, ಶೋಧ ಕಾರ್ಯ ಮುಂದುವರಿಕೆ