ಹಾವೇರಿ: "ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಕಾನೂನು ಕೈಗೆ ತೆಗೆದುಕೊಳ್ಳಲು ಯಾರಿಗೂ ಬಿಡುವುದಿಲ್ಲ" ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ. ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಅವರಿಗೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ" ಎಂದು ಹೇಳಿದರು.
ಪ್ರಕರಣವನ್ನು ಎಸ್ಐಟಿಗೆ ವಹಿಸಲು ಬಿಜೆಪಿ ಆಗ್ರಹ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, "ಎಸ್ಐಟಿ ನಲ್ಲಿರುವವರೂ ಪೊಲೀಸರೇ. ಪ್ರಕರಣದ ತನಿಖೆ ನಡೆಯುತ್ತಿದ್ದು, ಪ್ರಾಥಮಿಕ ವರದಿ ಬಂದ ನಂತರ ತೀರ್ಮಾನಿಸಲಾಗುವುದು" ಎಂದರು. ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, "ಪ್ರಕರಣ ಮುಚ್ಚಿಹಾಕವ ಪ್ರಶ್ನೆಯೇ ಇಲ್ಲ. ತಪ್ಪು ಮಾಡಿದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸಂತ್ರಸ್ತೆಯ ಕುಟುಂಬಸ್ಥರು ಪರಿಹಾರದ ಸಂಬಂಧ ನೀಡಿರುವ ಅರ್ಜಿಯನ್ನು ಪರಿಶೀಲನೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು" ಎಂದರು.
ಬೆಳಗಾವಿ ಜಿಲ್ಲೆಯ ಪ್ರಕರಣದಲ್ಲಿ ಮಾತ್ರ ತಕ್ಷಣ ಭೇಟಿ ನೀಡಿ ಪರಿಹಾರ ನೀಡಿದಿರಿ ಎಂಬ ಪ್ರಶ್ನೆಗೆ ಉತ್ತರಿಸಿ, "ಅಲ್ಲಿಗೆ ಗೃಹ ಸಚಿವರು ಭೇಟಿ ನೀಡಿದ್ದರು. ಭೇಟಿ ನೀಡುವಂತೆ ನಾನೇ ಸೂಚನೆ ನೀಡಿದ್ದೆ. ಈಗ ಗೃಹ ಸಚಿವರು ಇರಲಿಲ್ಲ. ಹಾಗಾಗಿ ಮಾಜಿ ಸಚಿವರು ಹಾಗೂ ಹಾಲಿ ಶಾಸಕರೂ ಆಗಿರುವ ಶಿವಣ್ಣನವರ್ ಸಂತ್ರಸ್ತೆಯನ್ನು ಭೇಟಿ ಮಾಡಿದ್ದಾರೆ. ಸಂತ್ರಸ್ತೆಯನ್ನು ಭೇಟಿ ಮಾಡಿ ಬರುವುದು ಸಾಂತ್ವನ ಹೇಳುವುದು ಒಂದು ಭಾಗವಾದರೆ ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ" ಎಂದರು. ಸಂತ್ರಸ್ತೆಗೆ ಚಿಕಿತ್ಸೆ ನೀಡದೇ ಆರೋಪಿಗೆ ಪೊಲೀಸರು ಚಿಕಿತ್ಸೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, "ಈ ಬಗ್ಗೆ ಶಿವಣ್ಣನವರ್ ಅವರೊಂದಿಗೆ ಮಾತನಾಡಿ ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು" ಎಂದು ಹೇಳಿದರು.
ಸಂಸ್ಕೃತಿ ಎಂದರೆ ಮನುಷ್ಯತ್ವ: ಅನಂತ ಕುಮಾರ್ ಹೆಗಡೆ ಹೇಳಿಕೆಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಮರ್ಥಿಸಿಕೊಂಡಿರುವ ಬಗ್ಗೆ ಮಾತನಾಡಿ, "ಅವರು ರಾಜಕೀಯವಾಗಿ ಆರೋಪ ಮಾಡುತ್ತಾರೆ. ಅನಂತ್ ಕುಮಾರ್ ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಿದ್ದರಿಂದ ಈಗ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ, ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ. ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯತ್ವ ಮುಖ್ಯ" ಎಂದರು.
ಇದನ್ನೂ ಓದಿ: ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮತ್ತಿಬ್ಬರ ಬಂಧನ: ಎಸ್‌ಪಿ