ಹಾವೇರಿ: ಸಿಎಂ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರೆ ಇನ್ನೊಂದೆಡೆ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ರು.
ನಗರದಲ್ಲಿನ ಬಿಜೆಪಿ ಪಕ್ಷದ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಂತರ ಹೊಸಮನಿ ಸಿದ್ದಪ್ಪ ವೃತ್ತಕ್ಕೆ ಆಗಮಿಸಿದ್ದು ಈ ವೇಳೆ ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಕುಮಾರಸ್ವಾಮಿ ಈ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಯು.ಬಿ.ಬಣಕಾರ ಸೇರಿದಂತೆ ವಿವಿಧ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ರಾಜ್ಯದ ಮೈತ್ರಿ ಸರ್ಕಾರವನ್ನ ಬಿಜೆಪಿ ಅಸ್ಥಿರಗೊಳಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರ ಮಾಡುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಇದೇ ವೇಳೆ ರಾಜೀನಾಮೆ ನೀಡಿದ ಬಿ.ಸಿ.ಪಾಟೀಲ್ ಮತ್ತು ಆರ್.ಶಂಕರ್ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಬಸವರಾಜ ಶಿವಣ್ಣನವರ್ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಎನ್.ಕರಿಯಣ್ಣನವರ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.