ಹಾವೇರಿ: ನಮ್ಮ ಭಾಗದಲ್ಲಿ ನೈತಿಕ ಪೊಲೀಸ್ ಗಿರಿ ಬಹಳ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಯಾವಾಗ ಬಿಜೆಪಿ ನೆಲೆ ಕಳೆದುಕೊಳ್ಳುತ್ತದೆಯೋ ಆಗ ಇಂತಹ ಘಟನೆಗಳು ಹೆಚ್ಚಾಗುತ್ತವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.
ಜಿಲ್ಲೆಯ ಹಾನಗಲ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ನೈತಿಕ ಪೊಲೀಸ್ಗಿರಿಯಲ್ಲ, ಅನೈತಿಕ ಪೊಲೀಸ್ಗಿರಿ. ಸಂಘ ಪರಿವಾರದ ಕೆಲವು ಸಂಘಟನೆಗಳು ಇವುಗಳನ್ನು ಛೂ ಬಿಟ್ಟಿದ್ದಾರೆ ಎಂದು ಆರೋಪಿಸಿದರು.
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಗಳೂರಿಗೆ ಭೇಟಿ ನೀಡಿದಾಗ ನೈತಿಕ ಪೊಲೀಸ್ಗಿರಿಯನ್ನು ಸಮರ್ಥನೆ ಮಾಡಿರುವುದು ಖಂಡನೀಯ. ಇದರಿಂದಾಗಿ ಸಿಎಂ ಸಹ ನೈತಿಕ ಪೊಲೀಸಗಿರಿಗೆ ಪುಷ್ಟಿ ನೀಡಿದಂತಾಗಿದೆ. ಇದರಿಂದ ಮತೀಯ ಸಾಮರಸ್ಯ ಕದಡುವಂತಾಗಿದೆ. ಜವಾಬ್ದಾರಿ ಸ್ಥಾನಗಳಲ್ಲಿರುವವರು ಈ ರೀತಿಯಾಗಿ ಮಾತನಾಡಬಾರದು. ರಾಜ್ಯದಲ್ಲಿ ಶಾಂತಿ ಕಾಪಾಡಬೇಕು. ಜನರ ಪ್ರಾಣ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ ಎಂದರು.
ಕಾಂಗ್ರೆಸ್ ಪಕ್ಷ ಕನ್ಯಾಕುಮಾರಿಯಿಂದ ಹಿಮಾಲಯದವರೆಗೆ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುತ್ತಿದೆ. ಡಾ.ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನವನ್ನು ಯಥಾವತ್ತಾಗಿ ಜನರಿಗೆ ನೀಡಬೇಕು ಎನ್ನುವುದು ಪಕ್ಷದ ನಿಲುವಾಗಿದೆ ಎಂದು ತಿಳಿಸಿದರು.