ಹಾವೇರಿ : ರಾಜ್ಯ ಸಚಿವ ಸಂಪುಟ ರಚನೆ ಕಸರತ್ತು ಆರಂಭವಾಗುತ್ತಿದ್ದಂತೆ ಜಿಲ್ಲೆಯಲ್ಲೂ ಸಹ ಸಚಿವ ಸ್ಥಾನ ಅಕಾಂಕ್ಷಿಗಳ ಸಂಖ್ಯೆ ಹೆಚ್ಚುತ್ತಿದೆ. ಅಲ್ಲದೆ, ಶಾಸಕರ ಬೆಂಬಲಿಗರು ಮುಖ್ಯಮಂತ್ರಿಗೆ ತಮ್ಮ ಶಾಸಕರಿಗೆ ಸಚಿವ ಸ್ಥಾನ ನೀಡಿ ಎಂದು ಒತ್ತಾಯಿಸುತ್ತಿದ್ದಾರೆ.
ಈಗಾಗಲೇ ಜಿಲ್ಲೆಯಿಂದ ಬಸವರಾಜ್ ಬೊಮ್ಮಾಯಿ ಮತ್ತು ಸಿ.ಎಂ. ಉದಾಸಿ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಈ ನಡುವೆ ನೆಹರು ಓಲೇಕಾರ್‌ಗೆ ಸಹ ಸಚಿವ ಸ್ಥಾನ ನೀಡಬೇಕೆಂಬ ಕೂಗು ಕೇಳಿಬಂದಿದೆ.
ನೆಹರು ಓಲೇಕಾರ್ ಈಗಾಗಲೇ ಎಸ್ಸಿ-ಎಸ್ಟಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅಲ್ಲದೆ ಮೂರು ಬಾರಿ ಶಾಸಕರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿ.ಎಂ. ಯಡಿಯೂರಪ್ಪ ತಮ್ಮ ಸಚಿವ ಸಂಪುಟದಲ್ಲಿ ನೆಹರು ಓಲೇಕಾರ್‌ಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡುವಂತೆ ಅಭಿಮಾನಿಗಳು ಆಗ್ರಹಿಸಿದ್ದಾರೆ.
ಈ ಕುರಿತು ಶೀಘ್ರದಲ್ಲಿ ಸಿ.ಎಂ. ಯಡಿಯೂರಪ್ಪರನ್ನ ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದು ನೆಹರು ಫ್ಯಾನ್ಸ್ ತಿಳಿಸಿದ್ದಾರೆ