ರಾಣೆಬೆನ್ನೂರು: ಸಾಲಮನ್ನಾ ಹಾಗೂ ಬೆಳೆ ಪರಿಹಾರದ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆ ಮುಖಂಡರು, ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
2018-19ನೇ ಸಾಲಿನ ಬೆಳೆ ಪರಿಹಾರವನ್ನು ಸರಿಪಡಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಪ್ರಸ್ತುತ ಯೂರಿಯಾ ಗೊಬ್ಬರ ಸಮರ್ಪಕವಾಗಿ ವಿತರಸದೆ, ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ರೈತ ಮುಖಂಡ ಹನುಮಂತಪ್ಪ ಕಬ್ಬಾರ ಆರೋಪಿಸಿದರು.
ಪ್ರಧಾನ ಮಂತ್ರಿ ಫಸಲಾ ಭೀಮಾ ಯೋಜನೆಯ ಪರಿಹಾರವು ರೈತರಿಗೆ ಜಮಾ ಆಗುತ್ತಿಲ್ಲ. ಇದನ್ನು ಸರಿಪಡಿಸಲು ಅನೇಕ ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಈವರೆಗೂ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು.
ಈ ಎಲ್ಲಾ ಸಮಸ್ಯೆಗಳನ್ನು ತಾಲೂಕು ಅಧಿಕಾರಿಗಳು ಸರಿಪಡಿಸುವಂತೆ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಮುಖ್ಯಮಂತ್ರಿಗಳಿಗೆ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.