ಹಾವೇರಿ: ಗ್ಯಾರಂಟಿ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರವು ಸಭೆಗಳನ್ನ ಮಾಡಲಿ. ಅವರ ನಿರ್ಧಾರದ ನಂತರ ನಾನು ಪ್ರತಿಕ್ರಿಯೆ ನೀಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಐದು ಗ್ಯಾರಂಟಿ ಯೋಜನೆಗಳಲ್ಲಿ ಯಾವುದನ್ನು ಕೊಡುತ್ತಾರೆ, ಯಾವುದನ್ನು ಕೊಡುವುದಿಲ್ಲ, ಏನು ಕಂಡಿಷನ್ ಅನ್ನೋದನ್ನ ಸಚಿವ ಸಂಪುಟ ಸಭೆಯ ಬಳಿಕ ತಿಳಿಯಲಿದೆ. ಸರ್ಕಾರ ನಿರ್ಧಾರದ ನಂತರ ಅದರ ಬಗ್ಗೆ ಪ್ರತಿಕ್ರಿಯೆ ಕೊಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಲಕ್ಷ್ಮಣ ಸವದಿ ಹಾಗೂ ಜಗದೀಶ್ ಶೆಟ್ಟರ್ ಭೇಟಿ ವಿಚಾರವಾಗಿ ಮಾತನಾಡಿ, ಅದು ಅವರ ಪಕ್ಷದ ಆಂತರಿಕ ವಿಚಾರ. ಭೇಟಿ ಆಗೋದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು. ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಸಮಿತಿ ರಚನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಏನು ಬದಲಾವಣೆ ಮಾಡುತ್ತಾರೆ ಎಂದು ಕಾದು ನೋಡೋಣ ಎಂದು ಮಾಜಿ ಸಿಎಂ ಬೊಮ್ಮಾಯಿ ತಿಳಿಸಿದರು.
ಪಠ್ಯಪುಸ್ತಕ ಪರಿಷ್ಕರಣೆಗೆ ತಂಡ ರಚನೆ: ಮಕ್ಕಳ ಭವಿಷ್ಯ, ಚಿಂತನೆ ಹಾಗೂ ಮಕ್ಕಳ ಅವಶ್ಯಕತೆ ಇರುವ ವಿದ್ಯಾಭ್ಯಾಸ ಬಿಟ್ಟು ಬೇರೆ ಏನಾದರೂ ಪಠ್ಯದಲ್ಲಿ ಇದ್ದರೆ, ಅದನ್ನು ಮುಖ್ಯಮಂತ್ರಿಗಳ ಗಮನಕ್ಕೆ ಬಂದು ಪರಿಷ್ಕರಣೆ ಮಾಡುವ ತೀರ್ಮಾನ ತೆಗೆದುಕೊಳ್ಳಲಾಗುವುದು. ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳ ನಿರ್ದೇಶನದಂತೆ ನಾನೇ ಒಂದು ತಂಡವನ್ನು ರಚನೆ ಮಾಡಿಕೊಳ್ಳುತ್ತಿದ್ದೇನೆ. ಕೆಲವು ದಿನಗಳಲ್ಲಿ ತಂಡ ರಚನೆಯಾಗಲಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಒಂದು ಸ್ಪಷ್ಟ ಚಿತ್ರಣ ಲಭಿಸಲಿದೆ. ಪಠ್ಯಪುಸ್ತಕದಲ್ಲಿರುವ ಎಲ್ಲ ವಿಚಾರಗಳನ್ನು ಕೂಡ ಪರಿಶೀಲನೆ ಮಾಡಲಾಗುವುದು ಎಂದು ಮಧು ಬಂಗಾರಪ್ಪ ಅವರು ತಿಳಿಸಿದ್ದರು.
ಇದನ್ನೂ ಓದಿ: ಕಾಂಗ್ರೆಸ್ ರಿವರ್ಸ್ ಗೇರ್ ಸರ್ಕಾರ: ಬಸವರಾಜ್ ಬೊಮ್ಮಾಯಿ
ಸಚಿವ ಸಂಪುಟ ಸಭೆ ಶುಕ್ರವಾರಕ್ಕೆ ಮುಂದೂಡಿಕೆ: ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದ್ದು, ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಹಾಗಾಗಿ ನಾಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಘೋಷಣೆಯಾಗುವುದಿಲ್ಲ. ಐದು ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಗ್ಯಾರಂಟಿಗಳನ್ನು ಎಲ್ಲರಿಗೂ ಉಚಿತವಾಗಿ ಕೊಡಲಾಗುವುದಿಲ್ಲ- ಶಿವಲಿಂಗೇಗೌಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ಸಾಹದಲ್ಲಿ ನನಗೂ ಫ್ರಿ, ನಿಮಗೂ ಫ್ರೀ ಎಂದು ಹೇಳಿದ್ದರು. ಒಂದು ಹದಿನೈದು ದಿನ ಸಮಯ ಕೊಡಿ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಲಿಲ್ಲ ಎಂದರೆ ನಿಮ್ಮ ಜೊತೆ ನಾನು ಸೇರಿಕೊಳ್ಳುತ್ತೇನೆ ಎಂದು ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಬಿಜೆಪಿ ನಾಯಕರ ಟೀಕೆಗೆ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: ತಾಕತ್ತಿದ್ದರೆ ಆರ್ಎಸ್ಎಸ್, ಬಜರಂಗದಳ ನಿಷೇಧಿಸಲಿ: ಕಾಂಗ್ರೆಸ್ಗೆ ಮಾಜಿ ಸಿಎಂ ಬೊಮ್ಮಾಯಿ ಸವಾಲು