ಹಾವೇರಿ: ರೈತರು ಬೆಳೆದ ಮೆಕ್ಕೆಜೋಳವನ್ನು ಸರ್ಕಾರವೇ ಖರೀದಿಸುವ ಕುರಿತಂತೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮತ್ತೊಮ್ಮೆ ಈ ಕುರಿತಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ಹಾವೇರಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ರಾಜ್ಯದ ಪ್ರಸ್ತಾವನೆಗಳಿಗೆ ಸ್ಪಂದಿಸುತ್ತಿದ್ದು, ಈ ಪ್ರಸ್ತಾವನೆಗೂ ಕೂಡ ಸ್ಪಂದಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಇನ್ನು ನ್ಯಾಯಬೆಲೆ ಅಂಗಡಿಗಳಲ್ಲಿನ ತೂಕ ಮತ್ತು ಹಣ ತೆಗೆದುಕೊಳ್ಳುವ ಕುರಿತಂತೆ ಟೀಂಗಳನ್ನ ರಚಿಸಲಾಗುತ್ತಿದೆ. ಪ್ರತಿ ಅಂಗಡಿಗೆ ಈ ತಂಡ ಭೇಟಿ ನೀಡಲಿದೆ. ನ್ಯಾಯಬೆಲೆ ಅಂಗಡಿಯಲ್ಲಿ ಗ್ರಾಹಕರಿಗೆ ತೂಕದಲ್ಲಿ ಮೋಸ ಮಾಡುತ್ತಿದ್ದರೆ, ಹಣ ಪಡೆಯುತ್ತಿದ್ದರೆ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.